ʻಉಡುಪಿ ಜಿಲ್ಲೆಯಲ್ಲಿ ೮ ಲಕ್ಷ ಮುನ್ನೆಚ್ಚರಿಕಾ ಡೋಸ್‌ ಗುರಿʼ


ಉಡುಪಿ, ಜು.೧೯- ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18ರಿಂದ 59 ವರ್ಷದೊಳಗಿನ ನಾಗರಿಕರಿಗೆ ಸೆಪ್ಟಂಬರ್ 30ರವರೆಗೆ ಎಂಟು ಲಕ್ಷ ಕೋವಿಡ್-19 ಮುಂಜಾಗ್ರತಾ ಡೋಸ್ ಲಸಿಕೆ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.
ಸೋಮವಾರ ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ, 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಉಚಿತ ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು 2ನೇ ಡೋಸ್ ಲಸಿಕೆ ನೀಡುವಲ್ಲಿ ಶೇ.100ರಷ್ಟು ಸಾಧನೆ ಮಾಡಲಾಗಿದೆ. ಪ್ರಸ್ತುತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸಾರ್ವಜನಿಕ ರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯ ಬಹುದಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ವಿವಿಧ ಸಂಘ ಸಂಸ್ಥೆಗಳು ಹಾಗೂ ನಾಗರಿಕರು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡಿದ್ದು, ಮುನ್ನೆಚ್ಚರಿಕಾ ಡೋಸ್ ನೀಡಿಕೆಯಲ್ಲಿ ಶೇ.100 ಪ್ರಗತಿ ಸಾಧಿಸುವಲ್ಲಿ ಕೂಡಾ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಮಾಧ್ಯಮ ಪ್ರತಿನಿಧಿಗಳು ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕೆಯನ್ನು ಪಡೆದರು. ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ. ಕೀರ್ತಿನಾಥ ಬಲ್ಲಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಸರ್ಜನ್‌ ಡಾ.ಮಧುಸೂದನ ನಾಯಕ್ ವಂದಿಸಿದರು.