ʻನ.೧೭ರಿಂದ ಪದವಿ, ಸ್ನಾತಕೋತ್ತರ ಕಾಲೇಜು ಆರಂಭʼ

ಮಂಗಳೂರು, ನ.1೪- ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ನ.17ರಿಂದ ಆರಂಭಗೊಳ್ಳಲಿವೆ ಎಂದು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್-19 ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯ, ಖಾಸಗಿ ವಿಶ್ವವಿದ್ಯಾನಿಲಯ, ಸರಕಾರಿ, ತಾಂತ್ರಿಕ, ಡಿಪ್ಲೋಮಾ, ಅನುದಾನ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳನ್ನು ನ.17ರಿಂದ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಪ್ರಾರಂಭಿಸಬೇಕು ಎಂದು ಹೇಳಿದರು. ಪ್ರತೀದಿನ ಕಾಲೇಜು ಪ್ರವೇಶಕ್ಕೆ ವಿದ್ಯಾರ್ಥಿಗಳು ಹಾಜರಾಗಲು ವಿದ್ಯಾರ್ಥಿಗಳ ಗುಂಪನ್ನು ವಿಂಗಡಣೆ ಮಾಡಿ ದಿನನಿತ್ಯ ಶೇ.50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು. ಉಳಿದ ಪ್ರಥಮ, ದ್ವಿತೀಯ, ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಸೂಚಿಸಿದರು. ತರಗತಿಗೆ ಹಾಜರಾಗುವ ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿ ಕಡ್ಡಾಯವಾಗಿ ಮೂರು ದಿನಗಳ ಮುಂಚಿತವಾಗಿ ಕೋವಿಡ್-19 ಪರೀಕ್ಷೆಯನ್ನು ಮಾಡಿಸಿ, ಪರೀಕ್ಷಾ ವರದಿ ನೆಗೆಟಿವ್ ಇದ್ದಲ್ಲಿ ಮಾತ್ರ ವಿಶ್ವವಿದ್ಯಾಲಯ ಅಥವಾ ಕಾಲೇಜುಗಳಿಗೆ ಹಾಜರಾಗಬೇಕು. ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ 1077ನ್ನು ಸಂಪರ್ಕಿಸಬಹುದು ಎಂದರು. ತರಗತಿಗಳಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿಲ್ಲ. ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ಬಗೆಹರಿಸಿ ಪ್ರತಿದಿನ ಆನ್‌ಲೈನ್ ತರಗತಿಗಳನ್ನು ನಡೆಸಬೇಕು ಎಂದು ಹೇಳಿದರು. ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜು ಪ್ರವೇಶ ಹಾಗೂ ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕಾನಿಂಗ್, ಸ್ಯಾನಿಟೈಸರ್‌ಗಳ ವ್ಯವಸ್ಥೆಯನ್ನು ಮಾಡಬೇಕು. ಮಾಸ್ಕ್‌ನ್ನು ಬೋಧಕ/ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸಬೇಕು ಎಂದು ತಿಳಿಸಿದರು. ಜ್ವರ, ಕೆಮ್ಮು, ಉಸಿರಾಟದ ಲಕ್ಷಣಗಳನ್ನು ಹೊಂದಿರುವ ಯಾವುದೇ ಬೋಧಕ/ಬೋಧಕೇತರ ಸಿಬ್ಬಂದಿಗೆ ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶ ನೀಡುವಂತಿಲ್ಲ. ಸಂಸ್ಥೆಯ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲ ಕೊಠಡಿ, ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ದಿನನಿತ್ಯ ಸ್ಯಾನಿಟೈಸ್ ಮಾಡಿಸಬೇಕು ಎಂದು ಸೂಚನೆ ನೀಡಿದರು. ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ, ಕುಡಿಯುವ ನೀರನ್ನು ತರಬೇಕು. ವಿದ್ಯಾರ್ಥಿಗಳು ಪೆನ್-ಪುಸ್ತಕ, ಲ್ಯಾಪ್‌ಟ್ಯಾಪ್ ಯಾವುದೇ ವಸ್ತುಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ. ಗ್ರಂಥಾಲಯ, ಕ್ಯಾಂಟೀನ್‌ಗಳನ್ನು ತೆರೆಯುವಂತಿಲ್ಲ ಎಂದರು. ಕಾಲೇಜಿನ ಆವರಣದಲ್ಲಿ ಎಲ್ಲೆಂದರಲ್ಲಿ ಉಗುಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ವಿದ್ಯಾರ್ಥಿಗಳು, ಉಪನ್ಯಾಸಕರು ‘ಆರೋಗ್ಯ ಸೇತು’ ಆ್ಯಪ್‌ಅನ್ನು ತಮ್ಮ ಮೊಬೈಲ್ ಪೋನ್‌ನಲ್ಲಿ ಇನ್‌ಸ್ಟಾಲ್ ಮಾಡಬೇಕು. ಕೋವಿಡ್ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹಾಗೂ ಮುಂಜಾಗ್ರತಾ ಕ್ರಮ ಭಿತ್ತಿಪತ್ರಗಳನ್ನು ಸೂಚನಾ ಫಲಕಗಳಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ‘ಸೇವಾಸಿಂಧು’ ವೆಬ್ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಬಸ್‌ಪಾಸ್‌ನ್ನು ಪಡೆಯಬಹುದು ಗೊಂದಲಪಡುವ ಅವಶ್ಯಕತೆ ಇಲ್ಲ. ಶಿಕ್ಷಕರು, ಅಧಿಕಾರಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯ ವಾಗಿ ಗುರುತಿನ ಚೀಟಿಯನ್ನು ಧರಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಚಂದ್ರ ಬಾಯರಿ, ವಿಶೇಷ ಅಧಿಕಾರಿ ಶ್ರೀಧರ್, ಡಾ.ದಯಾನಂದ್ ಪೈ-ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಶೇಖರ್ ಹೆಬ್ಬಾರ್ ಹಾಗೂ ವಿವಿಧ ಖಾಸಗಿ/ಸರಕಾರಿ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.