ಅಂಗನವಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ

ಗದಗ,ಜು.16:ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಉದ್ದೇಶದೊಂದಿಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸುವದರ ಮೂಲಕ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೀರೆ ಖರೀದಿಗಾಗಿ ನೇರವಾಗಿ ಡಿಬಿಟಿ ಮೂಲಕ ಕಾರ್ಯಕರ್ತೆಯರ ಖಾತೆಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗಿದೆ. ಗರ್ಭಿಣಿಯರಿಗೆ ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿತರಿಸಲಾಗುವ ಮೊಟ್ಟೆಗಳನ್ನು ಆಯಾ ತಾಲೂಕಿನಲ್ಲಿಯೇ ಖರೀದಿಸಲು ಅನುಮತಿಸಲಾಗಿದ್ದು ಹಾಗೂ ಔಷಧಿ ಪೂರೈಕೆಗೆ ಜನೌಷಧಿ ಕೇಂದ್ರಗಳಿಂದ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆಯಾ ಜಿಲ್ಲೆಗಳಲ್ಲಿನ ಮಕ್ಕಳ ಅಪೌಷ್ಟಿಕತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು ಆಯಾ ಪ್ರದೇಶದ ಆಹಾರ ಪದ್ಧತಿಯನ್ವಯ ಪೋಷಕಾಂಶಯುಕ್ತ ಆಹಾರ ಒದಗಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಶಾಸಕರುಗಳಾದ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಪ್ಪ ಪಲ್ಲೇದ, ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಹಾಜರಿದ್ದರು.