ಅಂತಾರಾಜ್ಯ ವಿಚಾರಗಳ ಚರ್ಚೆ : ಸಿಎಂ


ಬೆಂಗಳೂರು, ನ. ೧೪- ತಿರುಪತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ ನಡೆಯಲಿರುವ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಅಂತಾರಾಜ್ಯ ವಿಚಾರಗಳ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ವತಂತ್ರ ಭಾರತದ ಪ್ರಥಮ ಪ್ರಧಾನ ಪಂಡಿತ್ ಜವಹಾರ್‌ಲಾಲ್ ನೆಹರುರವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಾವರಿ, ರೈಲ್ವೆ, ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಸೌಹಾರ್ದಯುತವಾಗಿ ಜಾರಿ ಮಾಡುವ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದರು.
ಅಂತಾರಾಜ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆಯಲಿವೆ. ಪಾಲಾರ್ ವಲಯದ ಸಣ್ಣ ನೀರಾವರಿ ಯೋಜನೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆಗಳು ಆಗಬೇಕಿವೆ. ಈ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಚರ್ಚೆಗಳು ನಡೆಯುವ ಸಾಧ್ಯತೆ ಕಡಿಮೆ ಎಂದು ಹೇಳಿದರು.
ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಪ್ರತಿ ವಲಯದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಪೂರ್ವ ವಲಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದರು. ಇಂದು ದಕ್ಷಿಣ ವಲಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಅಂತಾರಾಜ್ಯಗಳ ನಡುವೆ ಅಭಿವೃದ್ಧಿ ವಿಚಾರಗಳಲ್ಲಿ ಯೋಜನೆಗಳ ಜಾರಿಯಲ್ಲಿ ಒಮ್ಮತ ಮೂಡಿಸುವ ಪ್ರಯತ್ನ ನಡೆಸಲಿದ್ದಾರೆ ಎಂದರು.
ಈ ಸಭೆಯಲ್ಲಿ ತಾವು ಪಾಲ್ಗೊಂಡು ರಾಜ್ಯದ ಪರವಾದ ಹಲವು ವಿಚಾರಗಳನ್ನು ಪ್ರಸ್ತಾಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನೆಹರು ಶ್ಲಾಘನೆ
ದೇಶದ ಪ್ರಥಮ ಪ್ರಧಾನಿಯಾಗಿ ನೆಹರುರವರು ದೇಶವನ್ನು ಕಟ್ಟಲು ವಹಿಸಿದ ಪಾತ್ರ ಬಹಳ ದೊಡ್ಡದಿದೆ ಎಂದರು.
ದೇಶದ ಅಭಿವೃದ್ಧಿಗೆ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶಕ್ಕೆ ಒಂದು ಭದ್ರ ಅಡಿಪಾಯ ಹಾಕಿಕೊಟ್ಟ ಶ್ರೇಷ್ಠ ಪ್ರಧಾನಿಗಳಲ್ಲಿ ನೆಹರುರವರು ಒಬ್ಬರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಉಪಸ್ಥಿತರಿದ್ದರು.