ಅಂತ್ಯಸಂಸ್ಕಾರ ಸಹಾಯಧನದಲ್ಲೂ ಅಕ್ರಮ; ಆರೋಪ

ದಾವಣಗೆರೆ,ಜ.09: ತಾಲ್ಲೂಕಿನ ಲೋಕಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತ್ಯಸಂಸ್ಕಾರ ಸಹಾಯಧನದಲ್ಲಿ ಅಕ್ರಮ ನಡೆದಿದೆ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಓಬಳೇಶ್ ಆರೋಪಿಸಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 2015ರಿಂದ 2020ರ ವರೆಗೆ ಲೋಕಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ, ಲೋಕಿಕೆರೆ ಗ್ರಾಮದ 55 ಫಲಾನುಭವಿಗಳಿಗೆ ಅಂತ್ಯಸಂಸ್ಕಾರದ ಸಹಾಯ ಧನ ನೀಡಲಾಗಿದೆ ಎಂಬುದಾಗಿ ದಾವಣಗೆರೆ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ಆದರೆ, ಈ ಬಗ್ಗೆ ಫಲಾನುಭವಿಗಳಿಗೆ ವಿಚಾರಿಸಿದರೆ, ನಮಗ್ಯಾರಿಗೂ ಸಹಾಯಧನ ಬಂದಿಲ್ಲ  ಎಂಬುದಾಗಿ ಹೇಳುತ್ತಿದ್ದಾರೆ. ಹೀಗಾದರೆ. ಆ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.ಫಲಾನುಭವಿಗಳಿಗೆ ಹಣ ಸಂದಾಯ ಮಾಡಿರುವುದರ ಬಗ್ಗೆ ಮಾಹಿತಿ ನೀಡಿ ಎಂದು ತಹಶೀಲ್ದಾರ್ ಅವರಿಗೆ ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಕೇಳಿದರೂ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳಿಗೆ ಮತ್ತು ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಹೇಳಿದರು.ಅಂತ್ಯಸಂಸ್ಕಾರ ಸಹಾಯಧನ ಯೋಜನೆಯಡಿ ಅಕ್ರಮ ನಡೆದಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.