ಅಂಬೇಡ್ಕರ್ ಅವರನ್ನು ಪ್ರತಿನಿತ್ಯ ಸ್ಮರಿಸುವ ಕಾರ್ಯವಾಗಬೇಕು:ಜಿಲ್ಲಾಧಿಕಾರಿ ಟಿ. ಭೂಬಾಲನ್

ಸಂಜೆವಾಣಿ ವಾರ್ತೆ,
ವಿಜಯಪುರ, ಏ.15 :ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಪ್ರತಿನಿತ್ಯ ಸ್ಮರಿಸಿ ಅವರ ಸಂದೇಶಗಳನ್ನು ಪಾಲಿಸುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕರೆ ನೀಡಿದರು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಭಾನುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಡಾ. ಬಾಬಾಸಾಹೇಬ್ ಅಂಬೇಡ್ಕರವರು ಬಡವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಸೇರಿದಂತೆ ಬಡ ದೀನ ದಲಿತರ ಜೀವನ ಮಟ್ಟ ಸುಧಾರಿಸಲು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದವರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶ ಕಲ್ಪಿಸಿ, ಮೂಲಭೂತ ಸೌಲಭ್ಯಗಳೊಂದಿಗೆ ಸುಭದ್ರ ಜೀವನ ಕಟ್ಟಿಕೊಳ್ಳಬೇಕೆಂಬುದು ಆಶಯ ಹೊಂದಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು, ಸಂವಿಧಾನದ ಆಶಯಗಳ ಕುರಿತು ಪ್ರತಿಯೊಬ್ಬ ನಾಗರಿಕನು ಅರಿವು ಹೊಂದಿಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆ- ಶಾಲೆಗಳಲ್ಲಿ ಅವರ ಆದರ್ಶ, ವಿಚಾರಗಳ ಕುರಿತು ಅರಿವು ಸಂವಿಧಾನ ಜಾಗೃತಿ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತಿದೆ. ಕೇವಲ ಜಯಂತಿ ಕಾರ್ಯಕ್ರಮಗಳ ದಿನದಂದೇ ಇಂತಹ ಮಹಾನ್ ವ್ಯಕ್ತಿಯನ್ನು ಸ್ಮರಿಸದೇ ಪ್ರತಿನಿತ್ಯ, ಪ್ರತಿಕ್ಷಣವೂ ಪ್ರತಿಯೊಬ್ಬರು ಸ್ಮರಿಸುವ ಮೂಲಕ ಸಂವಿಧಾನಕ್ಕೆ ಗೌರವ ನೀಡುವ ಕೆಲಸವಾಗಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಸಾಮಾಜಿಕ ನೋವುಗಳ ಅರಿವು ಹೊಂದಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಕಾನೂನು ಶಾಸ್ತ್ರ, ಸಮಾಜಶಾಸ್ತ್ರ ಸೇರಿದಂತೆ ಅನೇಕ ವಿಷಯಗಳಲ್ಲಿ ಪರಿಣಿತರಾಗಿದ್ದ ಅವರು, ಸಮಾಜದಲ್ಲಿನ ಶೋಷಿತ ವರ್ಗಗಳ ನ್ಯಾಯಕ್ಕಾಗಿ ಶ್ರಮಿಸಿ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆಗಾಗಿ ಹೋರಾಟ ಮಾಡಿದವರು. ದಲಿತ, ಮಹಿಳೆಯರ, ಹಿಂದುಳಿದ ವರ್ಗಗಳ ಜನರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಅವರು ಹಾಕಿಕೊಟ್ಟ ಮಾರ್ಗÀದಲ್ಲಿ ನಾವು ನಡೆಯಬೇಕು ಎಂದು ಹೇಳಿದರು.
ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ. ಸಾಮಾಜಿಕ ಪರಿಕಲ್ಪನೆ ಹೊಂದಿದ ಅವರು ಸಮಾಜದಲ್ಲಿರುವ ಪ್ರತಿಯೊಬ್ಬ ಪ್ರಜೆಯು ಕೂಡ ಗೌರವದಿಂದ, ಸ್ವಾಭಿಮಾನದಿಂದ ಬದುಕಬೇಕು ಎಂಬ ಹಿತದೃಷ್ಟಿಯಿಂದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಸಂವಿಧಾನದಲ್ಲಿ ಅಳವಡಿಸಿದ್ದಾರೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಅವರು ಮಾತನಾಡಿ, ಸಮಾಜದಲ್ಲಿ ಎಲ್ಲರೂ ನೆಮ್ಮದಿಯಿಂದ, ಶಾಂತಿಯುತವಾಗಿ ಬಾಳುವಂತ ಅವಕಾಶವನ್ನು ಕಲ್ಪಿಸಿಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ವಿಚಾರಧಾರೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ಬೆಳಿಗ್ಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಾಬಾಸಾಹೇಬ ಪುತ್ಥಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೊನಾವಣೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಶೀಲ್ದಾರ ಕವಿತಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ವಿವಿಧ ಸಮಾಜದವರಾದ ಅಭಿಷೇಕ ಚಕ್ರವರ್ತಿ, ಸಿದ್ದು ರಾಯಣ್ಣನವರ, ಅಡಿವೆಪ್ಪ ಸಾಲಗಲ್, ಫಯಾಜ್ ಕಲಾದಗಿ, ಆನಂದ ಔದಿ, ಎಂ.ಸಿ.ಮುಲ್ಲಾ, ರವಿ ಕಿತ್ತೂರ, ಅರುಣ ಗವಾರಿ, ಪ್ರಶಾಂತ ತೊರವಿ, ಚಂದ್ರಶೇಖರ ಚಕ್ರವರ್ತಿ, ಮಲ್ಲು ಬಿದರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.