ಅಂಬೇಡ್ಕರ್ ಜಯಂತಿ: ಕವಿಗೋಷ್ಠಿ, ವಿಚಾರ ಸಂಕಿರಣ, ಪೌರ ಕಾರ್ಮಿಕರಿಗೆ ನೇತ್ರ ಚಿಕಿತ್ಸಾ ಶಿಬಿರ

ಕಲಬುರಗಿ,ಮಾ.28:ನಗರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 132ನೇ ಜಿಲ್ಲಾ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದ್ದು, ಆ ನಿಮಿತ್ಯ ಕವಿಗೋಷ್ಠಿ, ವಿಚಾರ ಸಂಕಿರಣ ಹಾಗೂ ಪೌರ ಕಾರ್ಮಿಕರಿಗೆ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಯಂತ್ಯುತ್ಸವ ಸಮಿತಿಯ ಅಧ್ಯಕ್ಷ ದಿನೇಶ್ ದೊಡ್ಡಮನಿ ಅವರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 8ರಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಮತ್ತು ಮಹಿಳಾ ಸಂವೇದನೆ ಕುರಿತು ಒಂದು ದಿನದ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಖ್ಯಾತ ಕವಿಗಳು ಗೋಷ್ಠಿಯಲ್ಲಿ ಪಾಲ್ಗೊಳ್ಳುವರು. ಅದೇ ದಿನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರಬಂಧ ಸ್ಪರ್ಧೆಗೆ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದರು.
ಏಪ್ರಿಲ್ 9ರಂದು ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರಬುದ್ಧ ಭಾರತ ವಿಷಯ ಕುರಿತು ಒಂದು ದಿನದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕದ ಖ್ಯಾತ ಚಿಂತಕರು ವಿಚಾರಗಳನ್ನು ಮಂಡಿಸಲಿದ್ದಾರೆ. ಏಪ್ರಿಲ್ 10ರಂದು ಇದೇ ಮೊದಲ ಬಾರಿಗೆ ವಿಶೇಷವಾಗಿ ಪೌರ ಕಾರ್ಮಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ನೇತ್ರ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಅದನ್ನೂ ಸಹ ಮಾಡಿಸಲಾಗುವುದು ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಯಂತ್ಯುತ್ಸವ ಸಮಿತಿ ಕಾರ್ಯಾಧ್ಯಕ್ಷ ರಾಜು ಸಂಕಾ, ಪ್ರಧಾನ ಕಾರ್ಯದರ್ಶಿ ರುಕ್ಮೇಶ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ಅಶ್ವಿನ್ ಸಂಕಾ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ್ ಕಪನೂರ್ ಮುಂತಾದವರು ಉಪಸ್ಥಿತರಿದ್ದರು.