ಅಂರ್ತಜಲ ಮಟ್ಟ ಕಡಿಮೆಯಾಗದಂತೆ ಕ್ರಮ ಕೈಗೊಳ್ಳಿ: ಡಿ.ಸಿ ಎಲ್.ಚಂದ್ರಶೇಖರ ನಾಯಕ

ರಾಯಚೂರು,ಅ.೧8- ಜಿಲ್ಲೆಯಲ್ಲಿ ತೆರೆದ, ನಿರುಪಯುಕ್ತ ಕೊಳವೆ ಭಾವಿಗಳನ್ನು ಮುಚ್ಚಿರುವ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಮತ್ತು ಅಂತರ್ಜಲ ಮಟ್ಟ ಕಡಿಮೆಯಾಗದಂತೆ ಸೂಕ್ತ ಕ್ರಮ ಕೈಗೊಂಡು ವಾಣಿಜ್ಯ ಉದ್ದೇಶಕ್ಕಾಗಿ ಭೋರ್‌ವೆಲ್‌ಗಳನ್ನು ಹಾಕಿಸಿದ ಕಂಪನಿಗಳ ಸ್ಥಳ ಪರಿಶೀಲನೆ ಮಾಡಿ ಪರಿಶೀಲನಾ ವರದಿ ಸಿದ್ದಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಅ.೧೭ರ(ಮಂಗಳವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಹಾಕಿಸಿದ ಭೋರ್‌ವೆಲ್‌ಗಳಿಗೆ ಬೇಕಾದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ನಂತರ ನಿರಾಕ್ಷೇಪಣಾ ಪತ್ರವನ್ನು ನೀಡಬೇಕು ಮತ್ತು ಆಯಾ ಬೋರ್‌ಗಳಿಗೆ ಅಳವಡಿಸಲಾದ ಫ್ಲೋ ಮೀಟರ್‌ಗಳನ್ನು ನಿರಂತರವಾಗಿಒ ಪರಿಶೀಲಿಸಿ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಳಸದೇ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿ ಕೃಷ್ಣಾ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಲೋಕೇಶ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಸಾಧಿಕ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.