ಅಕ್ರಮ ಮದ್ಯ ಸಂಗ್ರಹ ನಾಲ್ವರ ಸೆರೆ

ಚಾಮರಾಜನಗರ,ಏ.೧೪- ಅಬಕಾರಿ ಅಧಿಕಾರಿಗಳು ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯ ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ. ಬಡಗಲಪುರ ಗ್ರಾಮದ ವೀರಭದ್ರಸ್ವಾಮಿ ಮನೆ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟುಕೊಂಡಿದ್ದ ೪,೮೮೨ ರೂ. ಮೌಲ್ಯದ ೧೨.೫೧೦ ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.ನಲ್ಲೂರು ಗ್ರಾಮದ ಸುಬ್ಬಯ್ಯ ಮನೆ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ ೧೭೫೬ ರೂ. ಮೌಲ್ಯದ ೪.೫೦೦ ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹನೂರು ತಾಲೂಕು ಅಜ್ಜೀಪುರ ಗ್ರಾಮದಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೩೩೭೨ ರೂ. ಮೌಲ್ಯದ ೮.೬೪೦ ಲೀಟರ್ ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಆರೋಪಿಯನ್ನು ಬಂಧಿಸಿ ಮೊಕದ್ದಮೆ ದಾಖಲಿಸಲಾಗಿದೆ. ವಾಹನ ವಶಕ್ಕೆ ಪಡೆಯಲಾಗಿದೆ. ಹನೂರು ತಾಲೂಕಿನ ಕೆ. ಗುಂಡಾಪುರ- ಕಾಂಚಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ೧೬೮೬ ರೂ. ಮೌಲ್ಯದ ೪.೩೨೦ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಲಾಗಿದೆ.