ಅಕ್ರಮ ಹಣ ಸಾಗಾಣಿಕೆ ವಿರುದ್ಧ ಕ್ರಮ: ಡಿಸಿ

ತುಮಕೂರು, ಮಾ. ೩೦- ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿ ಅವಧಿಯಲ್ಲಿ ದಾಖಲೆ ರಹಿತ ೧೦,೦೦೦ ರೂ.ಗಳಿಗಿಂತ ಹೆಚ್ಚಿನ ಮೌಲ್ಯದ ವಸ್ತು ಹಾಗೂ ೫೦,೦೦೦ ರೂ.ಗಳಿಗಿಂತ ಹೆಚ್ಚಿನ ಮೊತ್ತದ ಹಣವನ್ನು ಸಾಗಾಣಿಕೆ ಮಾಡುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾಖಲಾತಿ ಇಲ್ಲದೆ ೫೦,೦೦೦ ರೂ.ಗಳಿಗಿಂತ ಹೆಚ್ಚಿನ ಮೊತ್ತದ ಹಣ ಸಾಗಾಣಿಕೆ ಮಾಡಿದಲ್ಲಿ ಸಂಬಂಧಿಸಿದ ಚೆಕ್‌ಪೋಸ್ಟ್ ಅಧಿಕಾರಿಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ತಂಡ ಆ ಹಣವನ್ನು ಜಪ್ತಿ ಮಾಡಬೇಕು ಎಂದು ನಿರ್ದೇಶನ ನೀಡಿದರು.
ನೀತಿ ಸಂಹಿತೆ ಜಾರಿಯಾದ ಕೂಡಲೇ ಸಾರ್ವಜನಿಕರು ಅನಧಿಕೃತವಾಗಿ ಹೆಚ್ಚಿನ ಮೊತ್ತದ ಹಣವನ್ನು ಸಾಗಾಣಿಕೆ ಮಾಡುವಂತಿಲ್ಲ. ದಾಖಲೆ ಸಹಿತ ೧೦ ಲಕ್ಷ ರೂ.ಗಳಿಗಿಂತ ಮೇಲ್ಪಟ್ಟ ಹಣವನ್ನು ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಲ್ಲಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಹುಲ್ ಕುಮಾರ್ ಶಹಪೂರ್‌ವಾಡ್, ಡಾ. ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್. ರಾಜು, ಪಾಲಿಕೆ ಆಯುಕ್ತ ದರ್ಶನ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ, ಅಬಕಾರಿ ಉಪ ಆಯುಕ್ತೆ ಶೈಲಜಾ, ವಾಣಿಜ್ಯ ತೆರಿಗೆ ಇಲಾಖೆಯ ನಾಗರಾಜು ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.