ಅಗತ್ಯ ಬಿದ್ದರೆ ಕಲ್ಯಾಣ ಮಂಟಪಗಳಲ್ಲೂ ಚಿಕಿತ್ಸೆ ಕೊಡಿಸುವ ಪರ್ಯಾಯ ವ್ಯವಸ್ಥೆ: ಚವ್ಹಾಣ

ಬೀದರ:ಎ.25: ‘ಕೋವಿಡ್‌ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. ಕೆಲ ಖಾಸಗಿ ಸಂಸ್ಥೆಗಳ ಸಹಕಾರ ಪಡೆಯಲಾಗಿದೆ. ಅಗತ್ಯಬಿದ್ದರೆ ಕಲ್ಯಾಣ ಮಂಟಪಗಳಲ್ಲೂ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಕಾನ್ಫ್‌ರೆನ್ಸ್‌ ಹಾಲ್‌ನಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್‌ ಸೋಂಕಿತರ ಸಮರ್ಪಕ ಚಿಕಿತ್ಸೆಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿಯಿಂದ ಕಾಲ ಕಾಲಕ್ಕೆ ಮಾಹಿತಿ ಪಡೆಯಲಾಗುತ್ತಿದೆ.ರೆಮ್‌ಡಿಸಿವಿರ್‌ ಹಾಗೂ ಆಕ್ಸಿಜನ್‌ ಕೊರತೆ ಇಲ್ಲ. ಒಂದು ವೇಳೆ ಕೊರತೆ ಉಂಟಾದರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.ಶಾಸಕ ರಾಜಶೇಖರ್ ಪಾಟೀಲ, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರು ವರ್ಚುವಲ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಾಸಕರಾದ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಇದ್ದರು.
ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಹಾಜರಿದ್ದರು.