ಅತಿವೃಷ್ಟಿ ಜನರಿಗೆ ನೆರವಾಗಲು ಡಿ.ಸಿ. ಗಳಿಗೆ ಸಿ.ಎಂ. ಸೂಚನೆ ಜನರಿಗೆ

ಬೆಂಗಳೂರು, ಜು.೧೫- ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಆಗುತ್ತಿರುವ ಭಾರಿ ಮಳೆಯಿಂದಾಗಿ ಅತಿವೃಷ್ಟಿಗೆ ಸಿಲುಕಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಂಡು ಜನರ ಸುರಕ್ಷತೆಗೆ ಗಮನ ಹರಿಸುವಂತೆ ಸೂಚನೆ ನೀಡಿದರು.
ದೇವನಹಳ್ಳಿಯ ಹೊರ ವಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆದಿರುವ ಬಿಜೆಪಿಯ ಚಿಂತನಾ-ಮಂಥನ ಸಭೆಯ ನಡುವೆಯೇ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳ ಸಭೆ ನಡೆಸಿದರು.
ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ, ಆಗಿರುವ ಹಾನಿ, ಕೈಗೊಂಡಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಮಳೆಯಿಂದ ತೊಂದರೆಗೆ ಸಿಲುಕಿರುವ ಜನರಿಗೆ ತಡಮಾಡದೆ ನೆರವಿನ ಹಸ್ತ ಚಾಚಿ ಅವರ ಯೋಗಕ್ಷೇಮಕ್ಕೆ ಎಲ್ಲ ರೀತಿಯ ಕ್ರಮಕೈಗೊಳ್ಳಿ. ಯಾವುದೇ ಜೀವಹಾನಿಯಾಗದಂತೆ ಎಚ್ಚರ ವಹಿಸಿ ಎಂದು ಸೂಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ, ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಮುಖಾಂತರ ಸಭೆ ನಡೆಸಿದರು.
ಮುಂದಿನ ವಾರ ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳ ಅತಿವೃಷ್ಟಿಯ ಪ್ರದೇಶಗಳಿಗೆ ಭೇಟಿ ನೀಡುವುದಾಗಿಯೂ ಹೇಳಿದ ಮುಖ್ಯಮಂತ್ರಿಗಳು ಎಲ್ಲ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಸಮರೋಪಾದಿಯಲ್ಲಿ ಅತಿವೃಷ್ಟಿ ಪರಿಹಾರ ಕಾರ್ಯಗಳಲ್ಲಿ ತೊಡಗಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಗಳ ಜತೆ ಕಂದಾಯ ಸಚಿವ ಆರ್. ಅಶೋಕ್ ಸಹ ವೀಡಿಯೊ ಸಂವಾದದಲ್ಲಿ ಭಾಗಿಯಾದರು.