ಅತ್ಯಾಚಾರಿ, ಕೊಲೆಗಡುಕರಿಗೆ ಗಲ್ಲು ಶಿಕ್ಷೆ ವಿಧಿಸಿ ಆರೋಪಿ ಆಸ್ತಿಪಾಸ್ತಿ ಮುಟ್ಟುಗೋಲಿಗೆ ಒತ್ತಾಯ

ಕಲಬುರಗಿ:ನ.5:ಜಿಲ್ಲೆಯ ಆಳಂದ್ ತಾಲ್ಲೂಕಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಹಾಗೂ ಅವರ ಆಸ್ತಿಪಾಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿ ಶನಿವಾರ ನವ ಕರ್ನಾಟಕ ಸ್ವಾಭಿಮಾನ ವೇದಿಕೆ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಸುಮಾ ಎಸ್. ಕವಾಲ್ದಾರ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನಾ ಪ್ರದರ್ಶನ ಮಾಡಿದರು.
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ, ಬಡ ಕುಟುಂಬಗಳ ಮೇಲೆ ಅನ್ಯಾಯ ಮತ್ತು ದೌರ್ಜನ್ಯಗಳು ನಡೆಯುತ್ತಿದ್ದರೂ ಸಹ ಭ್ರಷ್ಟ ರಾಜಕಾರಣಿಗಳು ಕಣ್ಣು ಮುಚ್ಚಿ ಕುಳಿತುಕೊಂಡಿದ್ದಾರೆ. ಅದೇ ಅವರ ಮಕ್ಕಳಿಗೆ ಇಂತಹ ಅನ್ಯಾಯ ಆದರೆ ವಾರಗಂಟಲೇ ಸುದ್ದಿ ವಾಹಿನಿಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಆದಾಗ್ಯೂ, ಬಡ ಕುಟುಂಬಗಳಿಗೆ ನ್ಯಾಯ ದೊರಕುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಕೂಡಲೇ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವುದರೊಂದಿಗೆ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದ ಅವರು, ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿನ ಕನ್ನಡಪರ ಸಂಘಟನೆಗಳು ಒಟ್ಟುಗೂಡಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.