ಅದ್ದೂರಿ ಸ್ವಾತಂತ್ರ್ಯ ದಿನಾಚರಣೆಗೆ ತೀರ್ಮಾನ

ಮಧುಗಿರಿ, ಆ. ೬- ಆಗಸ್ಟ್ ಹದಿನೈದರ ಸ್ವಾತಂತ್ರ್ಯ ದಿನಾಚರಣೆ ೭೫ನೇ ಅಮೃತ ಮಹೋತ್ಸವ ಆಚರಣೆಯಾಗಿರುವುದರಿಂದ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.
ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರುಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ ೧೩ ರಿಂದ ೧೫ರವರೆಗೂ ಮೂರು ದಿನಗಳ ಕಾಲ ಸರ್ಕಾರಿ ಕಚೇರಿಗಳ ಮೇಲೆ, ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯ್ತಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದರು.
ರಾಷ್ಟ್ರಧ್ವಜಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾಡಬಾರದು. ಗೌರವದಿಂದ ರಾಷ್ಟ್ರಧ್ವಜ ಹಾರಿಸಬೇಕು ಎಂದು ತಿಳಿಸಿದ ಅವರು, ಈ ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಪೆರೇಡ್ ಮಾಡಲು ಅವಕಾಶ ನೀಡಲಾಗುವುದು ಎಂದರು.
ಸರ್ಕಾರಿ ನೌಕರರು ಕ್ರಿಯಾಶೀಲವಾಗಿ ಕೆಲಸ ಮಾಡಿದಾಗ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗುತ್ತದೆ. ಆಗಸ್ಟ್ ೧೫ ರ ಬೆಳಿಗ್ಗೆ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾತಂತ್ರೋತ್ಸವದ ದಿನಕ್ಕೆ ಚಾಲನೆ ನೀಡಲಾಗುವುದು. ಅದೇ ರೀತಿ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಆಗಸ್ಟ್ ೧೩ ರಿಂದ ತಮ್ಮ ಕಚೇರಿಗಳ ಮೇಲೆ ವಿದ್ಯುತ್ ಅಲಂಕಾರ ಮಾಡಬೇಕು ಎಂದು ಸೂಚಿಸಿದರು.
ಆಗಸ್ಟ್ ೧೫ ರ ಸ್ವಾತಂತ್ರ್ಯ ದಿನಾಚರಣೆಯಂದು ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಿರಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸುರೇಶ್ ಆಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ನಂಜುಂಡಯ್ಯ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.