ಅಧಿಕಾರಿಗಳು ಜಿಲ್ಲೆಯಲ್ಲಿ ಹೆಚ್ಚಿನ ಮತದಾನದ ಜಾಗೃತಿ ಮೂಡಿಸಿ : ಶಿಲ್ಪಾ.ಎಂ

ಬೀದರ, ಏ. 07: ಜಿಲ್ಲೆಯಲ್ಲಿ ಕಡಿಮೆ ಮತದಾನ ಆಗಿರುವ ಪ್ರದೇಶಗಳಲ್ಲಿ ಹಾಗೂ ಯುವ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಿ ಹೆಚ್ಚಿನ ಪ್ರಮಾಣದಲ್ಲಿ ಬೀದರ ಜಿಲ್ಲೆಯಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಶಿಲ್ಪಾ .ಎಂ ತಿಳಿಸಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಬೀದರ ಸಹಯೋಗದಲ್ಲಿ ಮತದಾನ ಜಾಗೃತಿ ಅಭಿಯಾನ ಕುರಿತು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

18 ವರ್ಷ ಮೇಲ್ಪಟ್ಟ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡಿಸಲು ಹಾಗೂ ಮತದಾನದ ಮಹತ್ವದ ಕುರಿತು ವಿಶೇಷ ಜಾಗೃತಿ ಮೂಡಿಸಬೇಕು. ಪ್ರತಿ ಮತಗಟ್ಟೆಗಳ ವ್ಯಾಪ್ತಿಯ ಮನೆ ಮನೆಗೆ ತೆರಳಿ ಜನರಿಗೆ ಮತದಾನದ ಮಾಡುವಂತೆ ತಿಳಿಸಬೇಕು ಹಾಗೂ ಗ್ರಾಮದ ಜನಸಂದಣಿ ಪ್ರದೇಶದಲ್ಲಿಯೂ ಅರಿವು ಮುಡಿಸುವ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಹೇಳಿದರು.

ರಾಜ್ಯ ಮಟ್ಟದ ಚುನಾವಣಾ ಮಾಸ್ಟರ್ ಟ್ರೈನರ್ ಡಾ. ಗೌತಮ ಅರಳಿ ಮಾತನಾಡಿ ಪ್ರತಿಯೊಬ್ಬರು ಪ್ಲೇಸ್ಟೋರ ಮೂಲಕ ಓಟರ್ ಹೆಲ್ಪ್ ಲೈನ್ ಆಪ್ ಡೌನ್‍ಲೋಡ್ ಮಾಡಿಕೊಂಡು ಅದರ ಮೂಲಕ ಚುನಾವಣೆಗೆ ಸಂ¨ಂದಿಸಿದ ಹೆಚ್ಚಿನ ಮಾಹಿತಿಯನ್ನು ಸಾರ್ವಜನಿಕರು ಪಡೆಯಬೇಕು ಎಂದರು.

ಈ ಸಭೆಯಲ್ಲಿ ಜಿಲ್ಲಾ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಸುರೇಖಾ ಮುನ್ನೋಳಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಬಡಿಗೇರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸ್ವೀಪ್ ಸಮಿತಿ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.