ಅನಧೀಕೃತವಾಗಿ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ವಿಶೇಷ ತಂಡ ರಚನೆ

ಕಲಬುರಗಿ,ನ.12:ದೀಪಾವಳಿ ಹಬ್ಬವನ್ನು ನ. 14 ರಿಂದ 16 ರವರೆಗೆ ಆಚರಿಲಾಗುತ್ತಿದೆ. ಕಲಬುರಗಿ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅನಧೀಕೃತವಾದ ಪಟಾಕಿ ಮಾರಾಟ ಮಳಿಗೆಗಳು ಹಾಗೂ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇನ್ಯಾವುದೇ ರೀತಿಯ ಅನಧೀಕೃತ ಪಟಾಕಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಪೊಲೀಸ್ ಅಧಿಕಾರಿಗಳು ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳನ್ನೊಳಗೊಂಡ ಒಂದು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ ಅವರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳನ್ನೊಳಗೊಂಡ ಒಂದು ವಿಶೇಷ ತಂಡ ರಚಿಸಿ, ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರದ ಎಲ್ಲಾ ಆದೇಶಗಳನ್ನು ಚಾಚು ತಪ್ಪದೇ ಪಾಲಿಸಬೇಕು.
ಕಲಬುರಗಿ ನಗರ ವ್ಯಾಪ್ತಿಯಲ್ಲಿ ಮಹಾನಗರಪಾಲಿಕೆಯಿಂದ ಶ್ರೀ ಶರಣಬಸವೇಶ್ವರ ಮೈದಾನದಲ್ಲಿ ಮಾತ್ರ ಪಟಾಕಿ ಮಳಿಗೆಗಳನ್ನು ಹಾಕಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ಇದೇ ನವೆಂಬರ್ 7 ರಿಂದ 16 ರವರೆಗೆ ಮಾತ್ರ ತೆರೆಯಬೇಕು. ಪಟಾಕಿ ಮಾರಾಟಗಾರರು ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಪರವಾನಿಗೆ ಪಡೆದ ವ್ಯಾಪಾರಿಗಳು ಮಾತ್ರ ತಾತ್ಕಾಲಿಕವಾಗಿ ಹಸಿರು ಪಟಾಕಿ ಅಂಗಡಿ ತೆರೆಯಬೇಕು. ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಮಾರಾಟ ಮಾಡಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶದಲ್ಲಿ ಹಸಿರು ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಬೇಕು.
ಸರ್ವೋಚ್ಛ ನ್ಯಾಯಾಲಯವು ಅನುಮತಿ ನೀಡಿದ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಇತರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡಬಾರದು ಹಾಗೂ ಹಚ್ಚಬಾರದು. ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು. ಪಟಾಕಿ ಮಾರಾಟಗಾರು ಪರವಾನಗಿ ಪ್ರತಿಯನ್ನು ಕಡ್ಡಾಯವಾಗಿ ಮಳಿಗೆಯಲ್ಲಿ ಸಾರ್ವಜನಿಕವಾಗಿ ಪ್ರದರ್ಶಿಸಬೇಕು.
ಹಸಿರು ಪಟಾಕಿ ಮಾರಾಟ ಮಾಡುವ ಮಳಿಗೆಗಳು ಕೋವಿಡ್-19 ಸಂಬಂಧ ವಿಧಿಸಿರುವ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದಕ್ಕೆ ತಪ್ಪಿದಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ / ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಅಧಿನಿಯಮ. 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.