ಅನುದಾನರಹಿತ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ : ನಮೋಶಿ ಒತ್ತಾಯ

ಕಲಬುರಗಿ,ಮೇ.20-ಲಾಕ್ ಡೌನ್ ನಿಂದಾಗಿ ಸಂತ್ರಸ್ತರಾದವರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದನ್ನು ಶ್ಲಾಘಿಸಿರುವ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಅವರು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅನುದಾನರಹಿತ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರಿಗೂ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಕೊರೊನಾದಿಂದಾಗಿ ಕಳೆದೊಂದು ವರ್ಷದಿಂದ ಶಾಲಾ ಕಾಲೇಜು ನಡೆಯದೆ ಅತಿಥಿ ಉಪನ್ಯಾಸಕರು ಮತ್ತು ಅನುದಾನರಹಿತ ಶಾಲಾ ಶಿಕ್ಷಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅವರಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವುದರ ಮೂಲಕ ನೆರವಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.
@12bc = ಸಂತಸ
ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿಕೆ ನೀಡಿರುವುದಕ್ಕೆ ನಮೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೊರೊನಾ ವಿಷಮ ಸ್ಥಿತಿಯಲ್ಲಿ ಶಿಕ್ಷಕರು ತಮ್ಮ ಕರ್ತವ್ಯ ಮಾಡುತ್ತ ವಿವಿಧ ಸ್ಥರಗಳಲ್ಲಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಬಹಳಷ್ಟು ಜನ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಶಿಕ್ಷಕ ಸಮುದಾಯ ಸಮಾಜಕ್ಕಾಗಿ, ಜನರಿಗಾಗಿ ವೈಯಕ್ತಿಕ ತೊಂದರೆ ಮರೆತು ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿದ್ದು, ಶ್ಲಾಘನೀಯ ಕಾರ್ಯವಾಗಿದೆ ಎಂದಿದ್ದಾರೆ.
ಈಗಾಗಲೇ ಕೊರೊನಾ ಸೋಂಕಿನಿಂದ ಅನೇಕ ಜನ ಶಿಕ್ಷಕರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಅವರಿಗೆ ಸಿಗಬೇಕಾಗದ ಪಿಂಚಣಿ ಸೌಲಭ್ಯ ಮತ್ತು ಅವರ ಕುಟುಂಬದ ಸದಸ್ಯರಿಗೆ ಅನುಕಂಪ ಆಧಾರಿತ ನೇಮಕಾತಿಯನ್ನು ಆದಷ್ಟು ಬೇಗನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.