ಅನುಷ್ಠಾನ ಕಡತಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಜ.03- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಕಡತಗಳನ್ನು ಬಾಕಿ ಇರಿಸಿಕೊಳ್ಳದೇ ತ್ವರಿತವಾಗಿ ವಿಲೇವಾರಿ ಮಾಡಿ ಕಾಲಮಿತಿಯೊಳಗೆ ಫಲಾನುಭವಿಗಳಿಗೆ ಸೌಲಭ್ಯ ತಲುಪುವಂತೆ ನೋಡಿಕೊಳ್ಳಬೇಕೆಂದು ಡಾ.ಎಂ.ಆರ್. ರವಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಅಭಿವೃದ್ದಿಗಾಗಿ ಪ್ರತೀ ಇಲಾಖೆಯಲ್ಲಿ ನಿಗದಿಯಾಗಿರುವ ಅನುದಾನ ನಿರ್ದಿಷ್ಟ ಅವಧಿಯೊಳಗೆ ವಿನಿಯೋಗವಾಗಬೇಕಿದೆ. ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮ ಜಾರಿ ಸಂಬಂಧ ಇರುವ ಯಾವುದೇ ಕಡತವನ್ನು ಅನಾವಶ್ಯಕವಾಗಿ ಇಟ್ಟುಕೊಳ್ಳದೇ ಕೂಡಲೇ ವಿಲೇವಾರಿ ಮಾಡಬೇಕು. ಸಂಬಂಧ ಪಟ್ಟ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ಸಿಗಬೇಕು ಎಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು.
ಕೆಲವು ಇಲಾಖೆಗಳು ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ಇನ್ನೂ ತ್ವರಿತವಾಗಿ ಮುಂದಾಗಬೇಕಿದೆ. ಈಗಾಗಲೇ ಜನವರಿ ಮಾಹೆ ಆರಂಭವಾಗಿದೆ. ನಿಗದಿತ ಗುರಿ ಅನುಸಾರ ಆಯಾ ಮಾಹೆಯಲ್ಲಿಯೇ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲೇಬೇಕು. ಕ್ರಿಯಾ ಯೋಜನೆ ಅನುಮೋದನೆ ಪಡೆಯದ ಇಲಾಖೆಗಳು ತಕ್ಷಣವೇ ಅನುಮೋದನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದರು.
ಯೋಜನೆ ಅನುಷ್ಠಾನದಲ್ಲಿ ಯಾವುದೇ ತೊಡಕುಗಳಿದ್ದರೆ ಸಂಬಂಧ ಪಟ್ಟ ಇತರೆ ಇಲಾಖೆ ಅಥವಾ ಉನ್ನತ ಕೇಂದ್ರ ಅಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು. ಅನಗತ್ಯ ಸಬೂಬು ಕಾರಣದಿಂದ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸದೇ ಇದ್ದಲ್ಲಿ ಗಂಭೀರ ಕ್ರಮಗಳಿಗೆ ಗುರಿಯಾಗಬೇಕಾಗುತ್ತದೆ. ಯಾವುದೇ ಸಣ್ಣ ವಿಚಾರವನ್ನೂ ಸಹ ಅಲಕ್ಷ್ಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದರು.
ಬ್ಯಾಂಕುಗಳಿಂದ ಸಾಲ ಸಹಾಯಧನ ನೀಡುವ ಯೋಜನೆ ಕಾರ್ಯಕ್ರಗಳ ಬಗ್ಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಬೇಕು. ಸಹಕಾರ ಸಮನ್ವಯದಿಂದ ಆಯಾ ಭಾಗದ ಬ್ಯಾಂಕುಗಳ ಮೂಲಕ ಫಲಾನುಭವಿಗಳಿಗೆ ಆರ್ಥಿಕ ನೆರವು ಸಿಗುವಂತೆ ನಿಗಾವಹಿಸಬೇಕು. ಕೈಗೊಂಡ ಕ್ರಮದ ಬಗ್ಗೆ ವರದಿ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಭಾಗಿರಥಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಇಬ್ರಾಹಿಂ, ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜು, ಕೃಷಿ ಜಂಟಿ ನಿರ್ದೇಶಕರಾದ ಚಂದ್ರಕಲಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಪಶುಪಾಲನಾ ಇಲಾಖೆ ಉಪನಿರ್ದೇಶಕರಾದ ಸಿ. ವೀರಭದ್ರಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜವರೇಗೌಡ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜು, ಪ್ರೇಮ್‍ಕುಮಾರ್ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.