ಅನ್ನಭಾಗ್ಯ ಅಕ್ಕಿ ಹೆಚ್ಚಿನ ಪ್ರಮಾಣದಲ್ಲಿ ವಿತರಿಸಲು ಮನವಿ

ರಾಯಚೂರು.ಮೇ.೨೮- ಲಾಕ್ ಡೌನ್ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆ ಪ್ರಮಾಣವನ್ನು ಹೆಚ್ಚಿಸುವಂತೆ ಆಗ್ರಹಿಸಿ, ಇಂದು ಪಡಿತರದಾರರು ಜಿಲ್ಲಾಧಿಕಾರಿಗಳ ನಿವಾಸಕ್ಕೆ ತೆರಳಿ ಮನವಿ ಮಾಡಿದ ಘಟನೆ ನಡೆಯಿತು.
ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ೫ ಕೆಜಿ ಅಕ್ಕಿ ನೀಡಲಾಗುತ್ತಿದೆ. ಇದು ಸಾಲುತ್ತಿಲ್ಲ. ಅನೇಕ ಸದಸ್ಯರನ್ನು ಹೊಂದಿದ ಕುಟುಂಬದವರಿಗೆ ೫ ಕೆಜಿಯಿಂದ ಜೀವನ ನಿರ್ವಹಿಸಲು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ. ನೇರವಾಗಿ ಜಿಲ್ಲಾಧಿಕಾರಿಗಳ ನಿವಾಸಕ್ಕೆ ತೆರಳಿದ ಜನರು ತಮಗೆ ಪಡಿತರ ಹೆಚ್ಚಿಸುವಂತೆ ಮನವಿ ಮಾಡಿದರು. ಚಿಕ್ಕ ಮತ್ತು ದೊಡ್ಡ ಕುಟುಂಬಗಳಿಗೆ ಏಕರೀತಿಯಲ್ಲಿ ಅಕ್ಕಿ ವಿತರಿಸಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆಗೆ ತೀವ್ರ ತೊಂದರೆಯಾಗಿದೆ. ಕಾರಣ ೧೦ ಕೆಜಿ ಪ್ರತಿ ಕುಟುಂಬಕ್ಕೆ ಅಕ್ಕಿ ವಿತರಿಸುವಂತೆ ಮನವಿ ಮಾಡಿದರು.
ಗ್ರಾಮೀಣ ಪ್ರದೇಶದಲ್ಲೂ ಇದೇ ರೀತಿಯಲ್ಲಿ ಅನ್ನಭಾಗ್ಯ ಸಮಸ್ಯೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಕ್ಷಣವೇ ಈ ಬಗ್ಗೆ ಗಮನ ಹರಿಸಿ, ಅಕ್ಕಿ ಹೆಚ್ಚುವರಿ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಕೋರಲಾಯಿತು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಗೌಡ, ಗ್ರಾಮೀಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.