
ವಿಜಯಪುರ:ಜು.8: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಶುಕ್ರವಾರ ಸಂಜೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಪಘಾತ ಪ್ರಮಾಣ ಕಡಿಮೆ ಮಾಡಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಅಧಿಕಾರಿಗಳು ನಿಯಮಗಳ ಕುರಿತು ಸೂಕ್ತ ಅರಿವು ಮೂಡಿಸಬೇಕು. ರಸ್ತೆಯ ಮಧ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು. ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವಲ್ಲಿ ರಸ್ತೆ ಸುಧಾರಣೆ ಹಾಗೂ ರಸ್ತೆ ಸುರಕ್ಷಾ ನಿಯಮ ಅನುಸರಿಸುವಂತೆ ಮತ್ತು ವೈಜ್ಞಾನಿಕ ರಸ್ತೆ ನಿರ್ಮಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪಘಾತ ಪ್ರಕರಣಗಳನ್ನು ತಡೆ ಗಟ್ಟಲು ಯೋಜನೆ ರೂಪಿಸಿಕೊಳ್ಳಬೇಕು. ಪೆÇಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಕ್ರಮ ಕೈಗೊಂಡು ಅಪಘಾತ ಕಡಿಮೆಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ಸೂಕ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಅಂಬುಲೆನ್ಸ್ ವ್ಯವಸ್ಥೆ ಕೈಗೊಳ್ಳಬೇಕು. ಪೆÇಲೀಸ್ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಹೋಗಿ ಮಕ್ಕಳಿಗೆ ರಸ್ತೆ ಸುರಕ್ಷಾ ನಿಯಮಗಳ ಪಾಲನೆಯ ಕುರಿತು ವಿವರಣೆ ನೀಡಬೇಕು. ಶಾಲಾ ವಾಹನಗಳ ಸುರಕ್ಷತೆ ಮತ್ತು ವಾಹನಗಳ ಅಗತ್ಯ ದಾಖಲಾತಿ ನಿರ್ವಹಿಸುತ್ತಿರುವ ಬಗ್ಗೆ ಆಗಾಗ ಖಚಿತ ಪಡಿಸಿಕೊಂಡು ಮಾಹಿತಿ ಸಂಗ್ರಹಿಸಬೇಕು ಎಂದು ಹೇಳಿದರು.
ಸಂಚಾರ ನಿಯಮಗಳ ಉಲ್ಲಂಘಿಸುವ ವಾಹನಗಳನ್ನು ಸಾರಿಗೆ ಇಲಾಖೆ ಅಗತ್ಯ ತಪಾಸಣೆ ಮಾಡಬೇಕು ಸಂಚಾರಿ ನಿಯಮಗಳು ಉಲ್ಲಂಘನೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಸಂಚಾರ ದಟ್ಟಣೆ ಹೆಚ್ಚುವ ಸ್ಥಳದಲ್ಲಿ ಅಗತ್ಯ ಹೆದ್ದಾರಿ ಫಲಕ- ಮಾಹಿತಿ ಪಲಕ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿಯಿಂದ ಪಟ್ಟಣಕ್ಕೆ ಸೇರುವ ಒಳರಸ್ತೆಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಿರುವುದರಿಂದ ಈ ಸ್ಥಳಗಳಲ್ಲಿ ರೋಡ್ ಬ್ರೇಕ್‍ರ್‍ಗಳನ್ನು ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಪೋಲಿಸ್ ಪೆಟ್ರೋಲಿಂಗ್ ವಾಹನ ಕಾಯ್ದಿರಿಸಬೇಕು. ಅಪಘಾತ ಸಂಭವಿಸಿದ ತಕ್ಷಣ ಗಾಯಾಳುಗಳನ್ನು ಗೋಲ್ಡನ್ ಹವರ್‍ನಲ್ಲಿ ಆದ್ಯತೆ ಮೇರೆಗೆ ವೈದ್ಯಕೀಯ ಚಿಕಿತ್ಸೆ ದೊರಕಿಸಲು ಕ್ರಮ ಕೈಗೊಳ್ಳಬೇಕು. ವಿವಿಧೆಡೆ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ಅಪಾಯ ಸೂಚನೆಯ ಗುರುತು ಫಲಕಗಳನ್ನು ಅಳವಡಿಸಬೇಕು. ಮುಖ್ಯ ರಸ್ತೆಯ ಮೇಲಿರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರುವಾಗ ಹಾಗೂ ಹೋಗುವಾಗ ರಸ್ತೆ ನಿಯಮಗಳನ್ನು ಪಾಲಿಸುವಂತೆ ಅರಿವು ಮೂಡಿಸಬೇಕು. ಇಂತಹ ಸ್ಥಳಗಳಲ್ಲಿ ಸಂಚಾರ ಸುವ್ಯವಸ್ಥೆಗೆ ಪೋಲಿಸರನ್ನು ನಿಯೋಜಿಸಬೇಕು. ಅಗಸನಾಳ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ವಲಯವಾಗಿರುವುದರಿಂದ ಗುರುತು ಫಲಕ ಅಳವಡಿಸುವಂತೆ ಅವರು ಸೂಚನೆ ನೀಡಿದರು.
ಮನಗೂಳಿಯಿಂದ ವಿಜಯಪುರ ನಗರದ ಸಾಯಿಪಾರ್ಕ್ ರಸ್ತೆವರೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಎಲ್.ಲಕ್ಕಣ್ಣವರ, ಪಂಚಾಯತ್‍ರಾಜ್ ಇಂಜಿನೀಯರಿಂಗ್ ವಿಭಾಗದ ಎನ್.ಎಂ.ಗಬಸಾವಳಗಿ, ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಉಪಸ್ಥಿತರಿದ್ದರು.