ಅಪಾಯದ ಮಟ್ಟ ತುಂಬಿ ಹರಿಯುತ್ತಿರುವ ಜಯಮಂಗಲಿ ನದಿ: ಜಿಲ್ಲಾಧಿಕಾರಿ ಭೇಟಿ

ತುಮಕೂರು, ಆ. ೪- ಧಾರಾಕಾರ ಮಳೆಯಿಂದ ಜಯಮಂಗಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನೀರು ನುಗ್ಗಿ ಜಲಾವೃತಗೊಂಡಿರುವ ಮಧುಗಿರಿ ತಾಲ್ಲೂಕು ಪುರವರ ಹೋಬಳಿ ಚನ್ನಸಾಗರ ಗ್ರಾಮಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ನದಿ ನೀರು ಹರಿಯುವ ಪ್ರಮಾಣ ಹೆಚ್ಚಾಗಿರುವುದರಿಂದ ಚನ್ನಸಾಗರ ಗ್ರಾಮದ ಕೆಲವು ಮನೆ, ಶಾಲೆ, ಜಮೀನುಗಳು ಜಲಾವೃತಗೊಂಡಿದ್ದು, ಜನ-ಜಾನುವಾರುಗಳಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳೆ ನೀರಿನಿಂದ ಬಾಧಿತರಾದವರಿಗೆ ಆಹಾರ ವ್ಯವಸ್ಥೆಗಾಗಿ ಜಿಲ್ಲಾಡಳಿತದ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ಕಾಳಜಿ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಬಾರದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಲಾವೃತವಾಗಿರುವ ಶಾಲೆಗಳಿಗೆ ೨ ದಿನಗಳ ಕಾಲ ರಜೆ ಘೋಷಣೆ ಮಾಡಲು ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಮದ ರಸ್ತೆಯಲ್ಲಿ ಸಂಚರಿಸಲು ಅನುವಾಗುವಂತೆ ಈಗಾಗಲೇ ಜೆಸಿಬಿಯಿಂದ ಕಾರ್ಯಾಚರಣೆ ಕೈಗೊಂಡಿದ್ದು, ಮುಂಜಾನೆಗಿಂತ ನೀರಿನ ಹರಿವಿನ ಪ್ರಮಾಣ ಈಗ ಕಡಿಮೆಯಾಗಿದೆ. ಮಳೆ ನೀರಿನಿಂದ ಬಾಧಿತರಾದವರಿಗೆ ರಕ್ಷಣೆ ನೀಡುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮ ಕಾರ್ಯ ಪಡೆಗೆ ಈಗಾಗಲೇ ನಿರ್ದೇಶನ ನೀಡಿದ್ದು, ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಮಧುಗಿರಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಪೊಲೀಸ್ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.