ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ

ಮೈಸೂರು,ಏ.25-ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ನಗರದ ಎಫ್​​​ಟಿಎಸ್​​​ಸಿ ನ್ಯಾಯಾಲಯ ತೀರ್ಪು ನೀಡಿದೆ.
ಶ್ರೀನಿವಾಸ್(19) ಎಂಬಾತ 2019ನೇ ಸಾಲಿನಲ್ಲಿ ವಿಜಯನಗರದಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಆಶ್ರಯ ಪಡೆದಿದ್ದ ವೇಳೆ ನಾಲ್ವರು ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ.
ಈ ಸಂಬಂಧ ಸಂಸ್ಥೆಯ ಅಧೀಕ್ಷಕರಾದ ಎಂ.ಕೆ.ಕುಮಾರಸ್ವಾಮಿಯವರು ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಆರೋಪಿ ಶ್ರೀನಿವಾಸನನ್ನು ವಶಕ್ಕೆ ಪಡೆದ ಪೊಲೀಸರು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆ ಎಫ್​​​​ಟಿಎಸ್​​ಸಿ ನ್ಯಾಯಾಲಯ ಏ. 23ರಂದು ತೀರ್ಪು ಪ್ರಕಟಿಸಿದೆ.