
ಭಾಲ್ಕಿ:ಜು.7: ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲು ಎಲ್ಲರ ಸಹಕಾರ ಮುಖ್ಯವಾಗಿರುತ್ತದೆ ಎಂದು ತಾಲೂಕು ಪಂಚಾಯಿತಿ ನೂತನ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಾನು ಹಿಂದೆಯು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದೇನೆ. ಇದೀಗ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಅವಕಾಶ ಒದಗಿಬಂದಿದೆ.
ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಉತ್ತಮ ಆಡಳಿತ ನೀಡುವ ಪ್ರಯತ್ನ ಮಾಡುತ್ತೇನೆ. ಗ್ರಾಮೀಣ ಭಾಗಗಳಲ್ಲಿ ಅಭಿವೃದ್ಧಿ ಅಧಿಕಾರಿಗಳು ಕೂಡ ಜನರ ಕುಂದು ಕೊರತೆಗಳಿಗೆ ತಕ್ಷಣ ಸ್ಪಂದಿಸಿ ಉತ್ತಮ ಆಡಳಿತ ನೀಡುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರಶೇಖರ ಬನ್ನಾಳೆ ಮಾತನಾಡಿ, ಸೂರ್ಯಕಾಂತ ಬಿರಾದಾರ್ ಅವರು ಈ ಹಿಂದೆ ತಾಲೂಕಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಎಡಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಅವರು ಇದೀಗ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವುದು ಸಂತಸ ತರಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ್, ಪದಾಧಿಕಾರಿಗಳಾದ ದಿಲೀಪ ಸಂತಪೂರೆ, ಚಂದ್ರಶೇಖರ ದೇಸಾಯಿ, ದೇವೀಂದ್ರಕುಮಾರ, ಪ್ರೇಮಲಾ, ಏಸ್ತಾರಾಣಿ, ಅಮೂಲ, ಮತಿವಂತ ಸೇರಿದಂತೆ ಹಲವರು ಇದ್ದರು.