ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸಿ :ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಚವ್ಹಾಣ

ಔರಾದ : ಆ.2:ತಾಲ್ಲೂಕು ವ್ಯಾಪ್ತಿಯಲ್ಲಿ ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ, ನಿರ್ಮಿತಿ ಕೇಂದ್ರ ಸೇರಿದಂತೆ ವಿವಿಧ ಇಲಾಖೆಯಿಂದ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಕೆಲಸಗಳನ್ನು ಚುರುಕುಗೊಳಿಸಬೇಕೆಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಆಗಸ್ಟ್ 1 ರಂದು ಔರಾದ ತಾಲ್ಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಔರಾದ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಸ್ತೆ, ಸೇತುವೆ, ಶಾಲೆ, ಅಂಗನವಾಡಿ ಕಟ್ಟಡ ಹೀಗೆ ಸಾಕಷ್ಟು ಪ್ರಗತಿ ಕೆಲಸಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಚಾಲ್ತಿಯಲ್ಲಿರುವ ಎಲ್ಲ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೆಲಸ ಹೇಗೆ ನಡೆಯುತ್ತಿದೆ ಎನ್ನುವುದನ್ನು ವೀಕ್ಷಿಸಬೇಕು. ಕೆಲಸ ಪೂರ್ಣಗೊಂಡ ನಂತರ ಕೆಲಸ ತೃಪ್ತಿದಾಯಕವಾಗಿ ಇದ್ದಲ್ಲಿ ಮಾತ್ರ ಇಲಾಖೆಯ ಅಧಿನಕ್ಕೆ ಪಡೆಯಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೆಲವೆಡೆ ಯೋಜನೆಯಂತೆ ಕೆಲಸ ಮಾಡಿಲ್ಲ. ಅಪೂರ್ಣ ಕೆಲಸಗಳೊಂದಿಗೆ ಕಾಮಗಾರಿ ಹ್ಯಾಂಡೋವರ್ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ. ಇಂಥಹ ಘಟನೆಗಳನ್ನು ಸಹಿಸುವುದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳಕ್ಕೆ ಭೇಟಿ ನೀಡಿ ಕೆಲಸವನ್ನು ವೀಕ್ಷಿಸಬೇಕು ಎಂದು ತಿಳಿಸಿದರಲ್ಲದೇ ವಿನಾ ಕಾರಣ ವಿಳಂಬ ಮಾಡುವ ಗುತ್ತಿಗೆದಾರರನ್ನು ಮುಲಾಜಿಲ್ಲದೇ ಕಪ್ಪು ಪಟ್ಟಿಗೆ ಸೇರಿಸಬೇಕು. ಕಾಮಗಾರಿ ಕಳಪೆಯಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಸಿದರು.

ವಿಪರೀತ ಮಳೆಯಿಂದಾಗಿ ಔರಾದ ಮತ್ತು ಕಮಲನಗರ ತಾಲ್ಲೂಕಿನ ಹಲವೆಡೆ ರಸ್ತೆಗಳು ಕೆಟ್ಟು ಹೋಗಿವೆ. ಇವುಗಳನ್ನು ಕೂಡಲೇ ಸರಿಪಡಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಗಾಳಿ-ಮಳೆಯಿಂದ ಗಿಡ-ಮರಗಳು ವಿದ್ಯುತ್ ತಂತಿಗಳ ಮೇಲೆ ಸಾಕಷ್ಟು ಗ್ರಾಮಗಳಲ್ಲಿ ವಿದ್ಯುತ್ ಅಭಾವ ಕಂಡುಬಂದಿದೆ. ಮತ್ತು ಕುಡಿಯುವ ನೀರಿನ ಸರಬರಾಜಿಗೂ ಸಮಸ್ಯೆಯಾಗುತ್ತಿದೆ. ಅಧಿಕಾರಿಗಳು ಕೂಡಲೇ ಸರಿಪಡಿಸಿ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಔರಾದ ಸಾರ್ವಜನಿಕ ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯಬೇಕು. ಆಸ್ಪತ್ರೆಯಲ್ಲಿನ ಬೆಡ್, ಬೆಡ್‍ಶೀಟ್‍ಗಳು ಶುಚಿಯಾಗಿಡಬೇಕು. ಸಣ್ಣ-ಪುಟ್ಟ ಕಾಯಿಲೆಗಳ ಚಿಕಿತ್ಸೆಗೆ ಬರುವ ರೋಗಿಗಳಿಗೆ ಬೀದರ, ಹೈದ್ರಾಬಾದ್‍ಗೆ ಕಳುಹಿಸುವುದು ನಿಲ್ಲಬೇಕು. ಎಲ್ಲ ರೋಗಿಗಳಿಗೆ ಔರಾದ್‍ನಲ್ಲಿಯೇ ಚಿಕಿತ್ಸೆ ನೀಡಬೇಕು ಎಂದು ಔರಾದ್ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ವೈದ್ಯರು ಸಮಯಪಾಲನೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು. ಎಲ್ಲ ಆಂಬ್ಯುಲೆನ್ಸ್ಗಳು ಸರಿಯಾಗಿ ಕೆಲಸ ಮಾಡಬೇಕು. ಸರಿಯಾಗಿ ಕೆಲಸ ಮಾಡದ ವೈದ್ಯಕೀಯ ಮತ್ತು ಆಡಳಿತ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡಬೇಕೆಂದು ತಾಲ್ಲೂಕು ವೈಧ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಔರಾದ ಪಟ್ಟಣವನ್ನು ಸುಂದರವಾಗಿಸಿ:

ಔರಾದ ಪಟ್ಟಣದ ವ್ಯಾಪ್ತಿಯಲ್ಲಿರುವ ಎಲ್ಲ ವಾಡ್ರ್ಗಳನ್ನು ಸ್ವಚ್ಛಗೊಳಿಸಬೇಕು. ಕೆಟ್ಟಿರುವ ಎಲ್ಲಾ ಬೀದಿ ದೀಪಗಳನ್ನು ಕೂಡಲೇ ಸರಿಪಡಿಸಬೇಕು. ಔರಾದ ಪಟ್ಟಣ ಸುಂದರವಾಗಿ ಕಾಣಲು ಬೇಕಿರುವ ಎಲ್ಲ ಕೆಲಸಗಳನ್ನು ಶೀಘ್ರ ಮಾಡುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ:
ಫಲಿತಾಂಶ ಸುಧಾರಣೆಯಷ್ಟೇ ಮಕ್ಕಳಿಗೆ ಗುಣಾತ್ಮಕ ಶಿಕ್ಷಣಕ್ಕೆ ನೀಡುವ ದಿಶೆಯಲ್ಲಿ ಗಮನ ಹರಿಸಬೇಕು. ಗ್ರಾಮ ಸಂಚಾರದ ವೇಳೆ ಅನೇಕ ಕಡೆಗಳಲ್ಲಿ 1 ರಿಂದ 7ನೇ ತರಗತಿಯ ಮಕ್ಕಳಿಗೆ ಕನಿಷ್ಠ ಓದಲು ಬರೆಯಲು ಬರದೇ ಇರುವುದು ಗಮನಕ್ಕೆ ಬಂದಿದೆ. ಎಲ್ಲ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಸಿಗಬೇಕು. ಈ ದಿಶೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶಿಕ್ಷಕರು ಶಾಲೆಗಳಿಗೆ ಸರಿಯಾಗಿ ಹೋಗುತ್ತಿಲ್ಲ. ಸರಿಯಾಗಿ ಬೋಧನೆ ನಡೆಯುತ್ತಿಲ್ಲ ಎನ್ನುವ ದೂರುಗಳು ಬರುತ್ತಿವೆ. ಎಲ್ಲ ಕಡೆ ಬಯೋಮೆಟ್ರಿಕ್ ಅಳವಡಿಸಿ ಶಿಕ್ಷಕರು ಸರಿಯಾಗಿ ಕೆಲಸ ಮಡುವಂತೆ ಮಾಡಬೇಕು. ತುರ್ತಾಗಿ ಮುಖ್ಯೊಪಾಧ್ಯಯರ ಸಭೆ ನಡೆಸಿ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಅಗತ್ಯ ನಿರ್ದೇಶನ ನೀಡಬೇಕು. ಕರ್ತವ್ಯ ಲೋಪ ಎಸಗುವ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಹೇಳಿದರು.

ಎಲ್ಲ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಆಟದ ಮೈದಾನದಂಥ ಅಗತ್ಯ ಮೂಲಭೂತ ಸೌಕರ್ಯಗಳಿರಬೇಕೆಂಬ ಉದ್ದೇಶವಿದೆ. ಸೌಕರ್ಯಗಳ ಕೊರತೆಯಿರುವ ಶಾಲೆಗಳ ಪಟ್ಟಿ ನೀಡಿದಲ್ಲಿ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಹೇಳಿದರು. ಎಲ್ಲ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಸಸಿ ನೆಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ನೀರಾವರಿ, ರೇಷ್ಮೆ, ಮೀನುಗಾರಿಕೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶು ಸಂಗೋಪನೆ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಔರಾದ ತಹಸೀಲ್ದಾರರಾದ ಅರುಣಕುಮಾರ ಕುಲಕರ್ಣಿ, ಕಮಲನಗರ ತಹಸೀಲ್ದಾರರಾದ ರಮೇಶ ಪೆದ್ದೆ, ಔರಾದ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಕಮಲನಗರ ಕಾರ್ಯನಿರ್ವಾಹಕ ಅಧಿಕಾರಿ ಸೈಯ್ಯದ್ ಫಜಲ್ ಮಹಮ್ಮೂದ್ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.