ಅಭಿವೃದ್ಧಿ ಕೆಲಸಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿ: ಸಚಿವ ಪ್ರಭು ಚವ್ಹಾಣ

ಬೀದರ, ಸೆ.06: ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರದಿಂದ ಸಾಕಷ್ಟು ಅನುದಾನ ಮಂಜೂರು ಮಾಡಿಸಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕೆಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಭಂಡಾರ ಕುಮಟಾ, ಡೊಂಗರಗಾಂವ, ಮಾಳೆಗಾಂವ್ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಗ್ರಾಮ ಸಂಚಾರ ನಡೆಸಿ ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಸಚಿವರು ಗ್ರಾಮಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕೃಷಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಜೆಸ್ಕಾಂ ಸಿಬ್ಬಂದಿ ಅವರು ಹೇಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದನ್ನು ಸ್ಥಳೀಯರ ಮೂಲಕ ತಿಳಿದುಕೊಂಡರು. ಈ ವೇಳೆ ಗ್ರಾಮಸ್ಥರು ಕುಡಿಯುವ ನೀರು, ವಿದ್ಯುತ್ ಪೂರೈಕೆ, ಪಡಿತರ ಸಮಸ್ಯೆ ಹೀಗೆ ನಾನಾ ರೀತಿಯ ಸಮಸ್ಯೆಗಳನ್ನು ಸಚಿವರೊಂದಿಗೆ ಹಂಚಿಕೊಂಡರು. ಸಂಬಂಧಿಸಿದ ಅಧಿಕಾರಿಗಳು ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಔರಾದ(ಬಿ) ವಿಧಾನಸಭಾ ಕ್ಷೇತ್ರ ಸಂಪೂರ್ಣ ಅಭಿವೃದ್ಧಿಯಾಗಬೇಕು. ಜನತೆಗೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂಬ ಉದ್ದೇಶದಿಂದ ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆ, ರಸ್ತೆ ಮತ್ತು ಸೇತುವೆಗಳ ನಿರ್ಮಾಣ, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ ಹೀಗೆ ಸಾಕಷ್ಟು ರೀತಿಯ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಯಾವುದೇ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಕೆಲಸ ಮಾಡಬೇಕೆಂದು ತಿಳಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಅಧಿನದಲ್ಲಿರುವ ಕಛೇರಿಗಳಿಗೆ ವಾರಕೊಮ್ಮೆಯಾದರೂ ತಪ್ಪದೇ ಭೇಟಿ ನೀಡಿ ಆಡಳಿತ ವ್ಯವಸ್ಥೆಯನ್ನು ಪರಿಶೀಲಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿಯ ಬಗ್ಗೆ ತಿಳಿದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೆಲಸಗಳು ಗುಣಮಟ್ಟದಿಂದ ನಡೆಯುವಂತೆ ನೋಡಿಕೊಳ್ಳಬೇಕು. ಕ್ಷೇತ್ರದಲ್ಲಿ ಯಾವೊಂದು ಕೆಲಸವೂ ಕಳಪೆಯಾಗಬಾರದು ಎಂದು ಸೂಚಿಸಿದರು.

ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಕೃಷಿ, ತೋಟಗಾರಿಕೆ, ಜೆಸ್ಕಾಂ ಸೇರಿದಂತೆ ಎಲ್ಲ ಸಿಬ್ಬಂದಿ ಇನ್ನಷ್ಟು ಹುರುಪಿನಿಂದ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸಬೇಕು. ಜನರ ಮೊಬೈಲ್ ಕರೆಗಳನ್ನು ತಿರಸ್ಕರಿಸುವುದು, ಸಾರ್ವಜನಿಕರ ಮೇಲೆ ರೇಗಾಡುವುದು, ವಿನಾ ಕಾರಣ ವಿಳಂಬ ಮಾಡುವುದು ಕಂಡು ಬಂದಲ್ಲಿ ಅಂಥ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಸಚಿವರು ಎಚ್ಚರಿಸಿದರು.

ಶಾಲೆ ಕಾಮಗಾರಿ ಪರಿಶೀಲನೆ: ಬೆಳಕುಣಿ(ಬಿಹೆಚ್) ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಸ್ಥಳಕ್ಕೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು. ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿಸಿ, ಸರಿಯಾಗಿ ಅಭ್ಯಾಸ ಮಾಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕಮಲನಗರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೈಯ್ಯದ್ ಫಜಲ್ ಮಹಮೂದ್, ಲೋಕೋಪಯೋಗಿ ಇಲಾಖೆಯ ಎಇಇ ವೀರಶೆಟ್ಟಿ ರಾಠೋಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಭಾಷ ದಾಳಗುಂಡೆ, ಜೆಸ್ಕಾಂ ಎಇಇ ರವಿ ಕಾರಬಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್ ನಗನೂರ, ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೋಮಶೇಖರ, ಸಿಡಿಪಿಓ ಭೀಮರಾವ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಸುರೇಶ ಭೋಸ್ಲೆ, ಗಿರೀಶ ಒಡೆಯರ್, ಶಿವರಾಜ ಅಲ್ಮಾಜೆ, ಶೇಷರಾವ ಕೋಳಿ, ಭರತ ಕದಮ್, ಸಚಿನ್ ರಾಠೋಡ, ಸೂರ್ಯಕಾಂತ ಅಲ್ಮಾಜೆ, ಪ್ರದೀಪ ಪವಾರ, ದೊಂಡಿಬಾ ನರೋಟೆ ಹಾಗೂ ಇತರರು ಉಪಸ್ಥಿತರಿದ್ದರು.