ಅಭ್ಯರ್ಥಿಗಳ ಆಯ್ಕೆಗೆ ಕೈ ಕಸರತ್ತು

ಸಂಜೆ ಸಭೆ

ಬೆಂಗಳೂರು, ಜ. ೧೯- ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಅದರಲ್ಲೂ ಆಡಳಿತರೂಢಾ ಕಾಂಗ್ರೆಸ್ ಪಕ್ಷದಲ್ಲಿ ಲೋಕಸಭಾ ಚುನಾವಣೆಯ ತಯಾರಿ ಬಿರುಸಾಗಿದ್ದು, ಇಂದು ಪಕ್ಷದ ರಾಜ್ಯ ಚುನಾವಣಾ ಸಮಿತಿ ಸಭೆ ಸೇರಿ, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ, ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಲಿದೆ.
ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ನ ರಾಜ್ಯ ಚುನಾವಣಾ ಸಮಿತಿ ಸಭೆ ಸಂಜೆ ನಡೆಯಲಿದೆ. ಈ ಸಭೆಯಲ್ಲಿ ೨೮ ಲೋಕಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದ್ದು, ಬಹುತೇಕ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಂದೇ ಅಂತಿಮಗೊಳ್ಳಲಿದೆ.ಇಂದಿನ ಸಭೆಯಲ್ಲಿ ೨೮ ಲೋಕಸಭಾ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಗೊಳಿಸಿ ಹೈಕಮಾಂಡ್ ಅನುಮೋದನೆಗೆ ಕಳುಹಿಸಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.ಇಂದಿನ ಚುನಾನವಣಾ ಸಮಿತಿ ಸಭೆಯಲ್ಲಿ ವಿವಿಧ ಕ್ಷೇತ್ರಗಳಿಗೆ ಚುನಾವಣಾ ಸಂಯೋಜಕರಾಗಿರುವ ಸಚಿವರುಗಳು, ಪಕ್ಷ ವೀಕ್ಷಕರುಗಳು ಅಭ್ಯರ್ಥಿ ಆಯ್ಕೆ ಬಗ್ಗೆ ನೀಡಿರುವ ವರದಿಯನ್ನಾಧರಿಸಿ ಸಂಭವನೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಇಲ್ಲವೆ ಮೂವರು ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಕಳುಹಿಸಲಾಗುತ್ತದೆ. ಅಂತಿಮವಾಗಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯನ್ನು ಪ್ರಕಟಿಸಲಿದೆ.ಮುಂದಿನ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಲೋಕಸಭಾ ಚುನಾವಣೆಗಳು ನಿಗದಿಯಾಗಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಆಯ್ಕೆಯನ್ನು ಬೇಗ ಪೂರ್ಣಗೊಳಿಸಲು ಮುಂದಾಗಿದ್ದು ಅದರಂತೆ ಫೆಬ್ರವರಿ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.
ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ಮಾನದಂಡದ ಮೇಲೆ ಅಭ್ಯರ್ಥಿಗಳ ಆಯ್ಕೆ ಆಗಲಿದ್ದು, ಎಲ್ಲರ ಅಭಿಪ್ರಾಯ ಆಲಿಸಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಲಾಗಿದೆ.
ಸಚಿವರ ಹೆಸರು ರವಾನೆ
ಇಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕೆಲ ಸಚಿವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಲಿದ್ದು, ವಿವಿಧ ಲೋಕಸಭಾ ಕ್ಷೇತ್ರಗಳಿಗೆ ೭-೮ ಸಚಿವರುಗಳ ಹೆಸರುಗಳನ್ನು ಹೈಕಮಾಂಡ್‌ಗೆ ಕಳುಹಿಸಲಾಗುತ್ತದೆ ಎಂದು ಹೇಳಲಾಗಿದೆ.
ಇಂದಿನ ಸಭೆಯಲ್ಲಿ ಎಐಸಿಸಿ ಕಾರ್ಯಕಾರಿ ಸದಸ್ಯ ಸೈಯಜ್ ನಾಜೀರ್ ಹುಸೇನ್, ಸಚಿವರುಗಳಾದ ಡಾ.ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಶಿವಾನಂದ್ ಪಾಟೀಲ್, ಕೆ.ಜೆ.ಜಾರ್ಜ್, ಜಮೀರ್ ಅಹಮದ್ ಖಾನ್, ಮಹದೇವಪ್ಪ, ಚಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಬೋಜರಾಜು, ಕೆ.ಹೆಚ್. ಮುನಿಯಪ್ಪ, ರಹೀಂಖಾನ್ ಸೇರಿದಂತೆ ಚುನಾವಣಾ ಸಮಿತಿಯ ೪೮ ಸದಸ್ಯರು ಹಾಗೂ ವಿಶೇಷ ಆಹ್ವಾನಿತರಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ವಿವಿಧ ಘಟಕಗಳ ಅಧ್ಯಕ್ಷರು ಭಾಗಿಯಾಗುವರು.