ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಸಿದ್ದು ಆಗ್ರಹ

ಬೆಂಗಳೂರು,ಜು.14-ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ, ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ಪ್ರಕರಣದಲ್ಲಿ ಉಪ್ಪು ತಿಂದವರು ನೀರು ಕುಡಿಯಲಿ ಎಂದು ಅವರು ಟ್ವೀಟ್​ ಮಾಡಿದ್ದಾರೆ.
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಮತ್ತು ಅಮೃತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.