ಮೈಸೂರು, ಏ.6:- ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಇಂದು ಮೈಸೂರು ಅರಮನೆಯ ವರಾಹ ದ್ವಾರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಚುನಾವಣಾ ರಾಯಭಾರಿಯಾದ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಚುನಾವಣೆಯಲ್ಲಿ ಮತದಾನ ಮಾಡುವುದು ಬಹಳ ಮುಖ್ಯವಾದ ಕರ್ತವ್ಯ ಹಾಗೂ ಜವಾಬ್ದಾರಿ. ಹಾಗಾಗಿ ನಾಗರಿಕರು ಯೋಚಿಸಿ ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ತಿಳಿಸಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. 18ವರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಯೂ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಬೇಕು. ಮತ ಚಲಾಯಿಸುವುದು ಪ್ರತಿಯೊಬ್ಬರ ಹಕ್ಕು ಎಂದು ನೆನಪಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಡಿಸಿಪಿಗಳಾದ ಎಂ.ಮುತ್ತುರಾಜ್, ಎಸ್.ಜಾಹ್ನವಿ , ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯತ್ರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.