
ಸಂಜೆವಾಣಿ ವಾರ್ತೆ
ಹೊಸಪೇಟೆ ಆ.21: ರಾಜ್ಯದಲ್ಲಿ ಸಾಮಾಜಿಕ ಸುಧಾರಣೆಯನ್ನು ಮುನ್ನೆಲೆಗೆ ತಂದವರು ಡಿ.ದೇವರಾಜ ಅರಸು ಅವರಾಗಿದ್ದು, ಅದನ್ನು ನಾವು ಮುಂದಿನ ಪೀಳಿಗೆಗೂ ನಿರಂತರವಾಗಿ ಮುಂದುವರೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ಅವರು ತಿಳಿಸಿದರು.
ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸಂಯುಕ್ತಾಶ್ರಯದಲ್ಲಿ ಭಾನುವಾರ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿ ಅರಸು ಅವರು ಮಹಾನ್ ದಾರ್ಶನಿಕ ಮಾತ್ರವಲ್ಲದೇ ದೂರದೃಷ್ಟಿ ಉಳ್ಳವರಾಗಿದ್ದರು. ಅವರಿಂದಾಗಿ ಸಮಾಜದಲ್ಲಿ ಹಿಂದುಳಿದ ವರ್ಗದವರು ತಲೆ ಎತ್ತಿ ಬದುಕುತ್ತಿರುವುದು ಸಾಧ್ಯವಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಅವರು ಮಾತನಾಡಿ ಅರಸು ಅವರ ಕೊಡುಗೆ ಅಪಾರವಾಗಿದ್ದು, ಅವರ ಸಾಮಾಜಿಕ ತುಡಿತ ಎಲ್ಲರಿಗೂ ಮಾದರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ‘ಡಿ.ದೇವರಾಜ ಅರಸುರವರ ತತ್ವ ಮತ್ತು ಚಿಂತನೆಗಳು’ ಎಂಬ ವಿಷಯದಡಿ ವಿಶೇಷ ಉಪನ್ಯಾಸ ನೀಡಿದ ನಿವೃತ್ತ ಉಪನ್ಯಾಸಕ ವೈ.ಯಮುನೇಶ್ ಅವರು ಮಾತನಾಡಿ ‘ಕರ್ನಾಟಕ ಕಂಡ ಇಬ್ಬರು ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರು ರಾಮಕೃಷ್ಣ ಹೆಗಡೆ, ಮತ್ತೊಬ್ಬರು ದೇವರಾಜ ಅರಸು ಆಗಿದ್ದಾರೆ. ಇವರಿಂದಾಗಿ ರಾಜ್ಯ ರಾಜಕೀಯ ಮತ್ತು ಸಾಮಾಜಿಕ ಕ್ರಾಂತಿ ನಡೆಯುವುದು ಸಾಧ್ಯವಾಯಿತು’. ಉಳುವವನೇ ಹೊಲದೊಡೆಯ ಎಂಬ ಕಾನೂನನ್ನು ಜಾರಿಗೆ ತಂದು, ಸಮಾಜದಲ್ಲಿನ ಹಲವು ಅನಿಷ್ಟಗಳನ್ನು ನಿರ್ಮೂಲನೆ ಮಾಡುವ ಮೂಲಕ ಸಮಾಜದಲ್ಲಿ ಹಲವರು ತಲೆ ಎತ್ತಿ ಬದುಕುವಂತೆ ಮಾಡಿದರು ಎಂದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ನಂತರ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯ, ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಬಿ.ರಾಮಚಂದ್ರಪ್ಪ, ಮುಖಂಡರಾದ ಹಾಲಪ್ಪ ಇದ್ದರು.