ಅರ್ಥಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ


ಚಿತ್ರದುರ್ಗ,ಅ.22; ಕೋವಿಡ್-19 ನಿಯಮಾವಳಿ  ಅನುಸರಿಸಿ  ಅರ್ಥಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಯಂತಿ ಆಚರಣೆಯನ್ನು ನಗರದ ತರಾಸು ರಂಗಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸಲಾಗುವುದು. ಸರ್ಕಾರದ ಮಾರ್ಗಸೂಚಿಗಳ ಅನ್ವಯ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ನಿಯಮ ಪಾಲನೆ ಅನ್ವಯ ಆಚರಿಸಲು ಅವಕಾಶವಿದೆ. ಹಾಗಾಗಿ ಕೋವಿಡ್-19 ನಿಯಮಾವಳಿ  ಪಾಲನೆ ಮಾಡಿ ಜಯಂತಿಯನ್ನು ಆಚರಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ಹಿನ್ನೆಲೆಯಲ್ಲಿ ಜಯಂತಿಯಲ್ಲಿ ಮೆರವಣಿಗೆಯನ್ನು ನಿಷೇಧಿಸಲಾಗಿದೆ.
ರಂಗಮಂದಿರದಲ್ಲಿ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಯಂತಿ ಅಂಗವಾಗಿ ಸಂಗೀತ ತಂಡಗಳು ಹಾಗೂ  ಕಿತ್ತೂರು ರಾಣಿ ಚೆನ್ನಮ್ಮ ಅವರ ಹೋರಾಟ ಹಾಗೂ ದೇಶಭಕ್ತಿ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕೋವಿಡ್-19 ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ ಮಾಡಬೇಕು ಎಂದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಧನಂಜಯ ಜಯಂತಿ ಆಚರಣೆ ಸಂಬಂಧವಾಗಿ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿ ಯಾವ ಯಾವ ಸಿದ್ದತೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ನಂದಗಾವಿ,  ಬಿಸಿಎಂ ಅಧಿಕಾರಿ ಅವೀನ್, ಸಮಾಜದ ಮುಖಂಡ ವಿಜಯ್ ಕುಮಾರ್, ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.