ಅರ್ಥಪೂರ್ಣ ಅಮೃತ ಮಹೋತ್ಸವಕ್ಕೆ ನಿರ್ಧಾರ: ಜಿಲ್ಲಾಧಿಕಾರಿ

ಧಾರವಾಡ,ಮಾ24: ಭಾರತ ಸರಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ವಿವಿಧ ಸಂಘ, ಸಂಸ್ಥೆ, ಶಾಲಾಕಾಲೇಜುಗಳ ಸಹಯೋಗದಲ್ಲಿ ಒಂದು ವರ್ಷ ಪೂರ್ತಿ ಪ್ರತಿ ವಾರ ಒಂದು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿರುವ ವಂದಿತಾ ಶರ್ಮಾ ಅವರೊಂದಿಗೆ ಜರುಗಿದ ವಿಡಿಯೋ ಕಾನ್ಫರೆನ್ಸ್ ಜರುಗಿದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧಾರವಾಡ ಜಿಲ್ಲೆಯ ನಾಯಕರು, ನಾಗರಿಕರು ಮಹತ್ವದ ಪಾತ್ರ ನಿರ್ವಹಿಸಿದ್ದಾರೆ. ಅನೇಕರು ತಮ್ಮ ಆಸ್ತಿ, ಜೀವ ತ್ಯಾಗ ಮಾಡಿದ್ದಾರೆ. ಗುಂಡಿಗೆ ಬಲಿಯಾಗಿದ್ದಾರೆ. ಅವರ ಸೇವೆ, ಬಲಿದಾನ ಸ್ಮರಿಸಿ, ಗೌರವಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ನಮಗೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತೈದು ವರ್ಷ ಕಳೆದಿವೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಮೂಲಕ ಇಂದಿನ ಯುವ ಪೀಳಿಗೆಗೆ ಇತಿಹಾಸದಲ್ಲಿ ದಾಖಲಾಗಿರುವ ನಮ್ಮ ನಾಯಕರ ಹೋರಾಟ, ಸ್ವಾತಂತ್ರ್ಯ ಸಂಗ್ರಾಮದ ಕುರಿತು ಜಾಗೃತಿ ಮೂಡಿಸುವ ಮತ್ತು ಜಿಲ್ಲೆಯ ಜನರಲ್ಲಿ ಹೆಮ್ಮೆ ಮೂಡಿಸುವಂತ ಅರ್ಥಪೂರ್ಣ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಿದ್ದತೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ, ಕ್ರೀಡಾ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ವರ್ಷ ಪೂರ್ತಿಯಾಗಿ ಪ್ರತಿ ವಾರಕ್ಕೆ ಒಂದರಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ವಿವಿಧ ಸಂಘ, ಸಂಸ್ಥೆ, ಗ್ರಾಮ ಪಂಚಾಯತ, ನಗರಸಭೆ, ಮಹಾನಗರ ಪಾಲಿಕೆ ಸೇರದಂತೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಚಿತ್ತ ಪ್ರದರ್ಶನ, ಗೋಷ್ಠಿ , ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಜೀವನ-ಸಾಧನೆ, ಸ್ವಾತಂತ್ರ್ಯ ಹೋರಾಟ ಸ್ಥಳಗಳ ಭೇಟಿ ಮುಂತಾದ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸಲಾಗುವುದು.
ಈ ಕುರಿತು ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದ್ದು, ಜಿಲ್ಲೆಯ ಇತಿಹಾಸ ರಚನಾಕಾರರ, ಸ್ವಾತಂತ್ರ್ಯ ಹೋರಾಟಗಾರರ ಮತ್ತು ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆ ಹಾಗೂ ಹೋರಾಟಕ್ಕೆ ಕೊಡುಗೆ ನೀಡಿದ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಶೀಘ್ರದಲ್ಲೇ ಸಭೆ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದಕರಾಳೆ,ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಮ್.ಎಲ್.ಹಂಚಾಟೆ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಚಿದಂಬರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.