ಅರ್ಹ ಮತದಾರರು ತಪ್ಪದೇ ಮತದಾನ ಮಾಡಿ

ಕಲಬುರಗಿ :ಎ.29: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನ ತುಂಬಾ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ. ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವಾಗಿದ್ದು, ಎಲ್ಲಾ ಅರ್ಹ ಮತದಾರರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೇ ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ, ಪ್ರಜ್ಞಾಪೂರ್ವಕವಾಗಿ ಮತ್ತು ಸೂಕ್ತ ವ್ಯಕ್ತಿಗೆ ಮತದಾನ ಮಾಡಿ, ಚುನಾಯಿಸಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯವಿದೆ ಎಂದು ಉಪನ್ಯಾಸಕ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ ಹೇಳಿದರು.

     ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಸ್ಥಾಪಿಸಿರುವ ಮತಗಟ್ಟೆ ಸಂಖ್ಯೆ 97 ಮತ್ತು 98 ಎದುರುಗಡೆ ವಿದ್ಯಾರ್ಥಿಗಳು, ಎನ್.ಎಸ್.ಎಸ್ ಸ್ವಯಂ ಸೇವಕರು, ಸ್ಥಳೀಯ ಶಾಲೆಗಳ ಶಿಕ್ಷಕರು, ಪೊಲೀಸ್ ಸಿಬ್ಬಂದಿ, ಮತದಾರರೊಂದಿಗೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉಪನ್ಯಾಸಕಿ ಶರಣಮ್ಮ ಭಾವಿಕಟ್ಟಿ ಮಾತನಾಡಿ, ಜ್ಞಾನಿಯಾಗಿರುವ ಮತ್ತು ಸಮಾಜದ ಬಗ್ಗೆ ನಿಜವಾದ ಕಳಕಳಿಯುಳ್ಳ ವ್ಯಕ್ತಿಯನ್ನು, ಭ್ರಷ್ಟಾಚಾರ ರಹಿತವಾಗಿ, ಹಣ, ಹೆಂಡ ಸ್ವೀಕರಿಸದೇ, ಪ್ರಾಮಾಣಿಕವಾಗಿ ಮತ ಚಲಾಯಿಸಿ, ಅಂತಹ ಜನಪ್ರತಿನಿಧಿಗಳನ್ನು ಚುನಾಯಿಸಿದರೆ, ಪ್ರಜಾಪ್ರಭುತ್ವದ ವ್ಯವಸ್ಥೆ ಬಲಿಷ್ಠವಾಗುವುದರ ಜೊತೆಗೆ, ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯವಿದೆ. ಪ್ರತಿಶತ ಮತದಾನವಾದರೆ ಅತ್ಯಂತ ಪ್ರಭಾವಶಾಲಿ ಜನನಾಯಕರು ದೊರೆಯಲು ಸಾಧ್ಯವಾಗುತ್ತದೆ. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರ.ದ.ಸ ನೇಸರ ಎಂ.ಬೀಳಗಿಮಠ, ಪ್ರಮುಖರಾದ ಭಾಗಣ್ಣ ಹನ್ನೂರ್, ಅಮೀನಸಾಬ್ ಇನಾಂದಾರ್, ಯಮನಪ್ಪ ಸೇರಿದಂತೆ ಇನ್ನಿತರರು ಇದ್ದರು.