ಅಲೆಮಾರಿ/ಅರೆ ಅಲೆಮಾರಿ ಜನಾಂಗದವರುಸ್ವಾಭಿಮಾನಿಗಳಾಗಿ ಬದುಕಬೇಕು

ಮಂಗಳೂರು, ಜ.೧೨- ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಸ್ವಾಭಿಮಾನಿಗಳಾಗಿ ಬದುಕಬೇಕು, ಯಾರು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಉತ್ತರ ವಿಧಾನ ಸಭಾ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.
ಅವರು ಶುಕ್ರವಾರ ಮಂಗಳೂರು ತಾಲೂಕಿನ ಪಡುಪೆರಾರು ಗ್ರಾಮ ಪಂಚಾಯತ್ ಬಳಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಮಾಹಿತಿ ಶಿಬಿರದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರದಿಂದ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಅನೇಕ ಕಲ್ಯಾಣ ಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಇದನ್ನು ಸದ್ಭಳಕೆ ಮಾಡಿಕೊಳ್ಳುವುದರೊಂದಿಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಭಿಗಳಾಗಬೇಕು ಎಂದರು.
ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಮಾತನಾಡಿ, ಸರಕಾರದ ವತಿಯಿಂದ ಈ ಸಮುದಾಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಜಮೀನಿನ ಹಕ್ಕು ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್
ಸದಸ್ಯ ಜನಾರ್ಧನ ಗೌಡ ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆಯ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಮಹಾಲಕ್ಷ್ಮೀ ಬೋಳಾರ್ ವಂದಿಸಿದರು. ರಾಧೇಶ್ ಕಾರ್ಯಕ್ರಮ ನಿರೂಪಿಸಿದರು.