ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ

ಬೆಂಗಳೂರು, ಫೆ. ೨೪- ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾಮಾಜಿಕ ಭದ್ರತೆ ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಅಧಿಕಾರಿಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದರು.
ಈ ಯೋಜನೆ ಅನುಷ್ಠಾನಕ್ಕೆ ಸಹಾಯಕ ಕಾರ್ಮಿಕ ಆಯುಕ್ತರು ಮತ್ತು ಅಧಿಕಾರಿಗಳ ಕಚೇರಿಗೆ ತಲಾ ೧ ರಂತೆ ೫೩ ಕಂಪ್ಯೂಟರ್, ಪ್ರಿಂಟರ್, ಯುಪಿಎಸ್‌ಗಳನ್ನು ಸರಬರಾಜು ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಅಬ್ದುಲ್ ಜಬ್ಬಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಗಳಲ್ಲಿ ಹುದ್ದೆಗಳಿಗೆ ಅನುಸಾರವಾಗಿ ಕಾರ್ಯಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ವಿವಿಧ ಏಜೆನ್ಸಿಗಳ ಮೂಲಕ ಹೊರ ಗುತ್ತಿಗೆ ಆಧಾರದ ಮೇಲೆ ಬೆಂಗಳೂರಿನಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ೭೯ ಹೊರ ಗುತ್ತಿಗೆ ಸಿಬ್ಬಂದಿಗಳು ಮತ್ತು ಕಾರ್ಮಿಕ ಇಲಾಖೆಯ ಕ್ಷೇತ್ರ ಮಟ್ಟದಲ್ಲಿ ಕಚೇರಿಗಳಲ್ಲಿ ೪೭೨ ಹೊರ ಗುತ್ತಿಗೆ ಸಿಬ್ಬಂದಿಗಳು ಸೇರಿ ೫೫೧ ಮಂದಿ ಹೊರ ಗುತ್ತಿಗೆ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಹೊರ ಗುತ್ತಿಗೆ ನೌಕರರಿಗೆ ನಿಯಮಾನುಸಾರ ಇಎಸ್‌ಐ, ಪಿಎಫ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.