ಅ.ಭಾ.ವೀರಶೈವ ಮಹಾಸಭಾದಿಂದ ಪ್ರತಿಭಟನೆ

ಧಾರವಾಡ,ಆ1 : ವೀರಶೈವ-ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಧಾರವಾಡ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ವರ್ಗ, ವರ್ಣ, ಜಾತಿರಹಿತ ಸಮಸಮಾಜದ ಪರಿಕಲ್ಪನೆಯನ್ನು ಸಮಾಜಕ್ಕೆ ನೀಡಿದ ಬಸವಾದಿ ಶರಣರು ಕೊಟ್ಟಂತಹ ಮಾರ್ಗದಲ್ಲಿಯೇ ಸಾಗಿದ ವೀರಶೈವ-ಲಿಂಗಾಯತ ಸಮಾಜಬಾಂಧವರು ಎಲ್ಲರನ್ನು ಒಪ್ಪಿಕೊಂಡು, ಅಪ್ಪಿಕೊಂಡು ಬಂದಂಥವರು. ಜಾತಿ, ಧರ್ಮದ ಬೇಧವಿಲ್ಲದೇ ಎಲ್ಲ ವರ್ಗದವರಿಗೂ ಶಿಕ್ಷಣ, ವಸತಿ ಮತ್ತು ದಾಸೋಹ ನೀಡುವ ಮೂಲಕ ರಾಷ್ಟ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದವರು. ಈ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗವಾಗಿದೆ ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ (ಓಬಿಸಿ) ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ವೀರಶೈವ-ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಒಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಯಿತು.
ಇಲ್ಲಿನ ಚನ್ನಬಸವೇಶ್ವರ ನಗರದಲ್ಲಿರುವ ಲಿಂಗಾಯತ ಭವನದಿಂದ ಸಪ್ತಾಪೂರ, ಕೆ.ಸಿ.ಡಿ ಸರ್ಕಲ್ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಛೇರಿಗೆ ಆಗಮಿಸಿ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಮೂರುಸಾವಿರಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳು, ಶ್ರೀ ಕುಮಾರ ವೀರುಪಾಕ್ಷೆಶ್ವರ ಸ್ವಾಮಿಗಳು ಇನ್ನಿತರರ ಸಾನಿಧ್ಯದಲ್ಲಿ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ ಅಂಬಡಗಟ್ಟಿ, ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಶಿಮರದ, ಲಿಂಗಾಯತ ಮುಖಂಡರಾದ ಶರಣಪ್ಪ ಕೊಟಗಿ, ಶಿವಾನಂದ ಕವಳಿ ಸೇರಿದಂತ ವಿವಿಧ ಘಟಕಗಳ ಪದಾಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಮಾಜದ ಮುಂಖಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.