ಆಂತರಿಕ ಪ್ರಜಾಪ್ರಭುತ್ವ ಅನುಸರಿಸುತ್ತಿರುವುದರಿಂದ ಬಿಜೆಪಿ ಪಟ್ಟಿ ಬಿಡುಗಡೆಗೆ ವಿಳಂಬ: ಸಂಸದ ತೇಜಸ್ವಿ ಸೂರ್ಯ

ಬೀದರ್: ಎ.9:ಬಿಜೆಪಿಯು ಆಂತರಿಕ ಪ್ರಜಾಪ್ರಭುತ್ವವನ್ನು ಅನುಸರಿಸುತ್ತಿರುವುದರಿಂದ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ವಿಳಂಬವಾಗಿದೆ ಎಂದು ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಬೀದರ್’ನ ಶಿಂಧೋಳ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ತೇಜಸ್ವಿ ಸೂರ್ಯ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷವು ಆಯಾ ಕ್ಷೇತ್ರಗಳ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿದೆ ಎಂದು ಹೇಳಿದರು. ಜೆಡಿಎಸ್ ಒಂದು ಕುಟುಂಬದ ಪಕ್ಷವಾಗಿದ್ದು, ಅದು ತನ್ನ ಅಭ್ಯರ್ಥಿಗಳನ್ನು ಇಚ್ಛೆಯಂತೆ ಘೋಷಿಸುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ 4 ರಿಂದ 5 ಗುಂಪಿನ ನಾಯಕರಿದ್ದು, ಅವರದೇ ಅಭ್ಯರ್ಥಿಗಳಿದ್ದಾರೆ.

ಹೀಗಾಗಿ ಎರಡು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಆದರೆ, ಬಿಜೆಪಿ ಆಂತರಿಕ ಪ್ರಜಾಪ್ರಭುತ್ವವನ್ನು ಅನುಸರಿಸುತ್ತಿರುವುದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ ಎಂದು ತಿಳಿಸಿದರು. ಪ್ರಧಾನಿಮಂತ್ರಿ ನರೇಂದ್ರ ಮೋದಿಯವರ ಅವರ ನೇತೃತ್ವದಲ್ಲಿ ದೇಶದ ಆರ್ಥಿಕತೆ ಸುಧಾರಿಸುತ್ತಿದೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಬಿಜೆಪಿ ಸರ್ಕಾರದ ಸಾಧನೆಯಾಗಿದೆ.

ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಮುಖಂಡರಾದ ಬಾಬು ವಾಲಿ, ಡಿ.ಕೆ.ಸಿದ್ರಾಮ, ಸಿದ್ದು ಪಾಟೀಲ ಇತರರು ಇದ್ದರು.