ಆಂಧ್ರದಲ್ಲಿ ಲಸಿಕೆ ಉಚಿತ

ಹೈದರಾಬಾದ್,ಏ.೨೪- ಕೊರೊನಾ ನಿಯಂತ್ರಣಕ್ಕೆ ಕೇರಳ ಸರ್ಕಾರ ರಾಜ್ಯದ ಎಲ್ಲರಿಗೂ ಉಚಿತವಾಗಿ ಲಸಿಕೆ ಹಾಕಲು ಮುಂದಾಗಿರುವ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಉಚಿತವಾಗಿ ಲಸಿಕೆ ನೀಡಲು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.
ರಾಜ್ಯದಲ್ಲಿ ೧೮ ವರ್ಷ ದಾಟಿದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ನಿರ್ಧರಿಸಿದೆ. ಆಂಧ್ರ ಪ್ರದೇಶದಲ್ಲಿ ೧೮ ರಿಂದ ೪೫ ವರ್ಷ ವಯೋಮಾನದ ಮಂದಿ ಸರಿಸುಮಾರು ೨.೦೪ ಕೋಟಿ ಜನರಿದ್ದಾರೆ.
ಉಚಿತವಾಗಿ ಲಸಿಕೆ ನೀಡಲು ಸರಿಸುಮಾರು ೮೧೮ ರಿಂದ ೯೦೦ ಕೋಟಿ ರೂಪಾಯಿ ವೆಚ್ಚವಾಗಬಹುದು ಎಂದು ಅಂದಾಜು ಮಾಡಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ. ಕರ್ನಾಟಕ, ಕೇರಳ, ತಮಿಳುನಾಡು ಹೊರತುಪಡಿಸಿ ಆಂಧ್ರ ಪ್ರದೇಶದಲ್ಲಿ ಅತಿ ಹೆಚ್ಚಿನ ಮಂದಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಲಸಿಕೆ ನೀಡಲು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಮುಂದಾಗಿದೆ.
ಇಂದಿನಿಂದ ರಾತ್ರಿ ಕರ್ಫ್ಯೂ
ಆಂಧ್ರ ಪ್ರದೇಶದಲ್ಲಿ ನಿತ್ಯ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ತಡೆಗೆ ಇಂದು ರಾತ್ರಿಯಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.
ರಾತ್ರಿ ೧೦ ಗಂಟೆಯಿಂದ ಮುಂಜಾನೆ ೫ ಗಂಟೆಯ ತನಕ ಕರ್ಫ್ಯೂ ವಿಧಿಸಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ, ಸರ್ಕಾರ ಆದೇಶ ಹೊರಡಿಸಿದ್ದು, ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯದ ಜನರಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮೊದಲ ೭ ಗಂಟೆ ಕರ್ಫ್ಯೂ ವಿಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಎ.ಕೆ ಶ್ರೀನಿವಾಸ ಅವರು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗುತ್ತದೆ. ವೈದ್ಯಕೀಯ,ಆರೋಗ್ಯ ಸೇವೆಗಳು ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹರಡುತ್ತಿರುವ ಸೋಂಕು ತಡೆಗಟ್ಟಲು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ ಹಾಗೂ ಜನರೂ ಕೂಡ ಸಹಕಾರ ನೀಡಬೇಕು ಎಂದರು.