ಆಡಳಿತ ಯಂತ್ರಕ್ಕೆ ಚುರುಕು ಜ. ೧೧ ಜಿಲ್ಲಾಧಿಕಾರಿಗಳ ಸಭೆ


ಬೆಂಗಳೂರು, ಜ. ೬- ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಇದೇ ತಿಂಗಳ ೧೧ ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.
ನಿನ್ನೆ ಮತ್ತು ಮೊನ್ನೆ ನಗರದಲ್ಲಿ ಬಿಜೆಪಿ ಶಾಸಕರ ಸಭೆಯಲ್ಲಿ ಬಹುತೇಕ ಶಾಸಕರು, ಸಚಿವರು, ಅಧಿಕಾರಿಗಳು ತಮ್ಮ ಕೆಲಸ ಮಾಡಿಕೊಡುತ್ತಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಅಧಿಕಾರಿಗಳಂತೂ ಮಾತು ಕೇಳುತ್ತಿಲ್ಲ ಎಂದೆಲ್ಲಾ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೇ ೧೧ ರಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆ ನಡೆಸಿ, ಅಧಿಕಾರಿಗಳಿಗೆ ಚುರುಕು ಮುಟ್ಟಿಸಲಿದ್ದಾರೆ ಎಂದು ಹೇಳಲಾಗಿದೆ.
ಈ ಸಭೆಯಲ್ಲಿ ಇದುವರೆಗೂ ಆಗಿರುವ ಪ್ರಗತಿ, ಅಭಿವೃದ್ಧಿ ಕಾರ್ಯಗಳ ಈಗಿನ ಸ್ಥಿತಿಗತಿ, ಎಲ್ಲದರ ಬಗ್ಗೆಯೂ ಮುಖ್ಯಮಂತ್ರಿಗಳು, ಅಧಿಕಾರಿಗಳಿಂದ ಮಾಹಿತಿ ಪಡೆದು, ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಿಸುವ ಸಂಬಂಧ ಅಧಿಕಾರಿಗಳಿಗೆ ಕೆಲ ಸ್ಪಷ್ಟ ನಿರ್ದೇಶನಗಳನ್ನು ನೀಡಲಿದ್ದಾರೆ ಎಂದು ಹೇಳಲಾಗಿದೆ.