ಆಯನೂರು-ಡಿಕೆಶಿ ಭೇಟಿ ಕುತೂಹಲಕ್ಕೆಡೆ

ಮಾಜಿ ಸಂಸದ ಆಯನೂರು ಮಂಜುನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವ ನಗರದ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು.

ಬೆಂಗಳೂರು, ಆ. ೨೦- ಮುಂಬರುವ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್ ಕಾಂಗ್ರೆಸ್‌ನಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿರುವಾಗಲೇ ಆಯನೂರು ಮಂಜುನಾಥ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸದಾಶಿವನಗರದ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ಆಯನೂರು ಮಂಜುನಾಥ್ ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಮುಂದಿನ ವರ್ಷ ನಡೆಯಲಿರುವ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿರುವಾಗಲೇ ಇವರಿಬ್ಬರ
ಭೇಟಿ ನಾನಾ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಹಿಂದೆ ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಆಯನೂರು ಮಂಜುನಾಥ್ ಅವರು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಜೆಡಿಎಸ್ ಸೇರಿ ಶಿವಮೊಗ್ಗ ನಗರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಈಗ ಇವರ ರಾಜೀನಾಮೆಯಿಂದ ತೆರವಾಗಿರುವ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಮುಂದಿನ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈ ಕ್ಷೇತ್ರದಿಂದ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ಸೌಜ್ಯದ ಭೇಟಿ: ರಾಜಕೀಯ ಇಲ್ಲ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ನನ್ನ ಹಳೆಯ ಸ್ನೇಹಿತರು. ಉಪಮುಖ್ಯಮಂತ್ರಿಯಾದ ನಂತರ ಅವರನ್ನು ಭೇಟಿ ಮಾಡಿರಲಿಲ್ಲ ಎಂದು ಆಯನೂರು ಮಂಜುನಾಥ್ ತಮ್ಮನ್ನು ಸಂಪರ್ಕಿಸಿದ ಸಂಜೆವಾಣಿಗೆ ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರ ಭೇಟಿ ಸೌಜನ್ಯದ್ದು. ರಾಜಕೀಯ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿಧಾನ ಪರಿಷತ್ತಿನ ಪದವೀಧರ ಕ್ಷೇತ್ರದ ಚುನಾವಣೆ ಇನ್ನು ದೂರವಿದೆ. ಈ ಬಗ್ಗೆ ಏನೂ ಚರ್ಚಿಸಿಲ್ಲ. ಮುಂದೆ ನೋಡೋಣ ಎಂದು ಹೇಳಿದರು.
ಡಿಕೆಶಿ ಪ್ರತಿಕ್ರಿಯೆ
ಆಯನೂರು ಮಂಜುನಾಥ್ ಅವರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಹಲವು ನಾಯಕರು ನನ್ನನ್ನು ಭೇಟಿ ಮಾಡುತ್ತಿದ್ದಾರೆ. ಎಲ್ಲದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಆಯನೂರು ಮಂಜುನಾಥ್ ಭೇಟಿಯ ಗುಟ್ಟು ಬಿಟ್ಟು ಕೊಡಲಿಲ್ಲ.