ಆಯನೂರು ಮಂಜುನಾಥ್ ಕೈ ಗೆ ಸೇರ್ಪಡೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಆಯನೂರು ಮಂಜುನಾಥ್‌ರವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರು,ಆ.೨೪:ಅನ್ಯ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಪರ್ವ ಮುಂದುವರೆದಿದೆ. ಇಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್
ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಶಿವಕುಮಾರ್‌ರವರು ಮಂಜುನಾಥ್‌ರವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಸಚಿವ ಮಧುಬಂಗಾರಪ್ಪ, ಮುಖಂಡರಾದ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್‌ರವರಿಗೆ ಟಿಕೆಟ್ ಸಿಗಲಿಲ್ಲ, ಇದರಿಂದ ಕುಪಿತಗೊಂಡು ಜೆಡಿಎಸ್‌ಗೆ ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು.
ಇತ್ತೀಚೆಗಷ್ಟೆ ಮಂಜುನಾಥ್‌ರವರು ಡಿ.ಕೆ. ಶಿವಕುಮಾರ್‌ರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮೊನ್ನೆಯಷ್ಟೇ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ದೃಷ್ಟಿಯಿಂದ ಬಿಜೆಪಿ-ಜೆಡಿಎಸ್ ಪಕ್ಷಗಳ ಶಾಸಕರಿಗೆ ಗಾಳ ಹಾಕಲು ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ. ಮುಂಬರುವ ದಿನಗಳಲ್ಲಿ ಅನ್ಯ ಪಕ್ಷಗಳಿಂದ ಕಾಂಗ್ರೆಸ್‌ಗೆ ವಲಸೆ ಬರುವ ಸಾಧ್ಯತೆ ದಟ್ಟವಾಗಿದೆ.