ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಸದುಪಯೋಗಪಡಿಸಿಕೊಳ್ಳಿ

ಕಲಬುರಗಿ: ಜು.16:ಎಲ್ಲರಿಗೂ ವೈದ್ಯಕೀಯ ಸೌಲಭ್ಯಗಳನ್ನು ದೊರಕಿಸಿಕೊಟ್ಟು, ಆರೋಗ್ಯಯುತ ರಾಷ್ಟ್ರ ನಿರ್ಮಾಣ ಮಾಡಬೇಕು ಎಂಬ 1650 ವಿವಿಧ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿರುವ ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ’ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಇದರ ಬಗ್ಗೆ ಜಾಗೃತಿ ಮೂಡಿಸಬೇಕು. ಸೂಕ್ತ ಫಲಾನುಭವಿಗೆ ಯೋಜನೆಯ ಸೌಲಭ್ಯಗಳು ದೊರೆಯಬೇಕು ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ.ಪಾಟೀಲ ಹೇಳಿದರು.

    ನಗರದ ಶೇಖರೋಜಾದಲ್ಲಿರುವ ಶಹಾಬಜಾರ 'ನಗರ ಪ್ರಾಥಮಿಕ ಆರೋಗ್ಯ ಕೇಂದ್ರ'ದಲ್ಲಿ ಏರ್ಪಡಿಲಾಗಿದ್ದ 'ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ' ಕಾರ್ಡ ವಿತರಸಿ ನಂತರ ಅವರು ಮಾತನಾಡುತ್ತಿದ್ದರು.

ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಮಾತನಾಡಿ, ಬಿ.ಪಿ.ಎಲ್ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ, ಎ.ಪಿ.ಎಲ್ ಕುಟುಂಬಕ್ಕೆ ಪಾವತಿ ಆಧಾರದ ಮೇಲೆ ಶೇ.30ರಷ್ಟು ಚಿಕಿತ್ಸಾ ವೆಚ್ಚ ಸರ್ಕಾರದಿಂದ ಪಾವತಿ, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ಗರಿಷ್ಠ 1.5 ಲಕ್ಷ ರೂಪಾಯಿಯವರೆಗೆ ನೀಡಲಾಗುತ್ತದೆ. ಪ್ರಾಥಮಿಕ ಕಾಯಿಲೆಗಳು ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತು ಹೃದಯಘಾತ, ಅಪಘಾತ ಸೇರಿದಂತೆ ಮುಂತಾದವುಗಳನ್ನು ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಡಿ.ವಿ.ಕುಲಕರ್ಣಿ, ಶ್ರೀನಿವಾಸ ಬುಜ್ಜಿ, ನಾಗೇಶ್ವರಿ ಮುಗಳಿವಾಡಿ, ಮಂಗಳಾ ಚಂದಾಪುರೆ, ಲಕ್ಷ್ಮೀ, ನಾಗಮ್ಮ, ರೇಷ್ಮಾ ನಕ್ಕುಂದಿ, ಶ್ರೀದೇವಿ, ಸಚಿನ್ ಸೇರಿದಂತೆ ಬಡಾವಣೆಯ ಹಾಗೂ ಸುತ್ತಲಿನ ನಾಗರಿಕರು, ಮಹಿಳೆಯರು ಸೇರಿದಂತೆ ಮತ್ತಿರರು ಪಾಲ್ಗೊಂಡಿದ್ದರು.