ಆರೋಗ್ಯಕರ ಪೈಪೋಟಿಯಿಂದ
 ಕೆಎಸ್‍ಎಂಸಿಎ ಕಾರ್ಯನಿರ್ವಹಿಸಲು ಸಿ.ಎಂ ಕರೆ


ಬೆಂಗಳೂರು, ಜ.7: ಕಳೆದ ಐವತ್ತು ವರ್ಷಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ತಾಂತ್ರಿಕವಾಗಿ ಆಗುತ್ತಿರುವ  ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ತಂತ್ರಜ್ಞಾನವನ್ನು ಹೆಚ್ಚಾಗಿ ಬಳಸಿಕೊಂಡು ಹೆಚ್ಚು ಕ್ರಿಯಾಶೀಲತೆ ಮತ್ತು ಸೃಜನಶೀಲತೆಯಿಂದ ಕಾರ್ಯನಿರ್ವಹಿಸುವುದರ ಮೂಲಕ ಖಾಸಗಿ ಕಂಪನಿಗಳ ಜೊತೆ ಪೈಪೋಟಿ ನಡೆಸುವಂತೆ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್‍ಗೆ (ಕೆಎಸ್‍ಎಂಸಿಎ) ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ  ಕಿವಿಮಾತು ಹೇಳಿದರು.
ಬೆಂಗಳೂರಿನ ಖಾಸಗಿ ಹೋಟಲ್‍ನಲ್ಲಿ ನಡೆದ ಕೆಎಸ್‍ಎಂಸಿಎ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಐವತ್ತು ವರ್ಷಗಳಲ್ಲಿ ದೇಶದಲ್ಲಿ ಮತ್ತು ರಾಜ್ಯದಲ್ಲಿ ರಾಜಕೀಯವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ತಾಂತ್ರಿಕವಾಗಿ ಸಾಕಷ್ಟು ಬದಲಾವಣೆಗಳಾಗಿದ್ದು ಈ ಎಲ್ಲಾ ಬದಲಾವಣೆಗಳ ನಡುವೆಯೂ ಸಂಸ್ಥೆಯೊಂದು ಐವತ್ತು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದರ ಜೊತೆಗೆ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿರುವುದು ದೊಡ್ಡ ಸಾಧನೆ ಎಂದು ಮೆಚ್ಚುಗೆ ಸೂಚಿಸಿದರು.
ಸರ್ಕಾರದ ಸಂಸ್ಥೆ ಎಂದ ಮೇಲೆ ಹಲವಾರು ನೀತಿ, ನಿರ್ಬಂಧಗಳು ಇರುತ್ತವೆ. ಆದರೂ ಖಾಸಗಿ ಸಂಸ್ಥೆಗಳ ಜೊತೆ ಪೈಪೋಟಿ ನಡೆಸುತ್ತಾ ಮುಖ್ಯಮಂತ್ರಿಗಳ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೆ ಏರಿಸಿಕೊಂಡು ಸಂಸ್ಥೆ ಪ್ರಗತಿಯತ್ತ ಮುನ್ನುಗ್ಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ಲಾಘಿಸಿದರು.  ಇದೇ ಸಂದರ್ಭದಲ್ಲಿ ಜಿಲ್ಲಾ ಶಾಖಾ ಕಛೇರಿ ಕಟ್ಟಡಗಳ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ವರ್ಚುವಲ್ ಮೂಲಕ ಚಾಲನೆ ನೀಡಿದರು.
ಸಂಸ್ಥೆಯ ನೂತನ ಲಾಂಛನ ಅನಾವರಣ ಮತ್ತು ಸುವರ್ಣ ಮಹೋತ್ಸವ ವಿಶೇಷ ಅಂಚೆ ಲಕೋಟೆ ಬಿಡುಗಡೆ ನೆರವೇರಿಸಿ ಮಾತನಾಡಿದ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಡಾ. ಮುರುಗೇಶ್ ಆರ್.ನಿರಾಣಿ ರವರು, ಕೆಎಸ್‍ಎಂಸಿಎ ಬೆಳವಣಿಗೆಗೆ ಪೂರಕವಾದ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಂಸ್ಥೆಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರವರು ಖಾಸಗೀ ಜಾಹೀರಾತುಗಳನ್ನು ಪ್ರಕಟಿಸಲು ಎಂಸಿಎ ಸಂಸ್ಥೆಗೆ  ಸ್ವಾಯತ್ತತೆ ಅಗತ್ಯವಿದ್ದು, ರಾಜ್ಯ ಸರ್ಕಾರದಿಂದ ಅದನ್ನು ಕೊಡಿಸಲು ಸಚಿವ ಮುರುಗೇಶ್ ನಿರಾಣಿ ಮುಂದಾಗಬೇಕು ಎಂದು ಸಲಹೆ ಮಾಡಿದರು.
ಪ್ರಾಸ್ತಾವಿಕ ಭಾಷಣ ಮಾಡಿದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಸಿದ್ದಲಿಂಗಪ್ಪ ಬಿ. ಪೂಜಾರಿ ರವರು ಕಳೆದ 50 ವರ್ಷಗಳಲ್ಲಿ ಸಂಸ್ಥೆ ನಡೆದು ಬಂದ ಹಾದಿಯನ್ನು ಎಳೆಎಳೆಯಾಗಿ ವಿವರಿಸಿ ತಮ್ಮ ಅಧಿಕಾರದ ಅವಧಿಯಲ್ಲಿ ಸಂಸ್ಥೆಯ ಪ್ರಗತಿಗೆ ಪೂರಕವಾಗಿ  ಜಿಲ್ಲಾ ಕೇಂದ್ರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ಮಂಗಳೂರು, ತುಮಕೂರು, ಚಿತ್ರದುರ್ಗ ಹಾಗೂ ಮಂಡ್ಯ ನಗರಗಳಲ್ಲಿ ಶಾಖಾ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನಗಳನ್ನು ಖರೀದಿಸಿದ್ದು , ಇವುಗಳ ಪೈಕಿ ಕೆಲವೊಂದು ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆದು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ ರವರು ಸಭೆಯನ್ನುದ್ದೇಶಿಸಿ ಮಾತನಾಡಿದರು ಮತ್ತು ಸಂಸ್ಥೆಯ ಅಭಿವೃದ್ಧಿಗೆ ಕೈಗೊಳ್ಳಲು ಉದ್ದೇಶಿಸಿರುವ ಪ್ರಸ್ತಾವನೆಯ  ಮನವಿಪತ್ರವನ್ನು ಮುಖ್ಯಮಂತ್ರಿಗಳಿಗೆ  ಸಲ್ಲಿಸಿದರು. 
ಸಮಾರಂಭದ ಅಧ್ಯಕ್ಷತೆಯನ್ನು ಶಿವಾಜಿ ನಗರದ ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಮತ್ತು ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ಸಂಸ್ಥೆಯ ನಿರ್ದೇಶಕರುಗಳು ಹಾಗೂ ಮಾಜಿ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ  ಗ್ರಾಹಕರು ಹಾಗೂ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.