ಆರೋಗ್ಯ ತಪಾಸಣಾ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳಿ- ರಮೇಶ

ರಾಯಚೂರು,ಸೆ.೦೫- ಗ್ರಾಮೀಣ ಭಾಗದ ಮಹಿಳೆಯರು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳಬೇಕು. ಕಾಯಿಲೆ ಬರುವ ಮುನ್ನವೇ ನಾವು ಎಚ್ಚರವಹಿಸಿದರೆ ನಾವು ಆಸ್ಪತ್ರೆಗಳಿಗೆ ದಾಖಲಾಗುವುದು ಮತ್ತು ಔಷಧಿಗಳನ್ನು ತೆಗೆದುಕೊಳ್ಳುವುದರಿಂದ ತಪ್ಪಿಸಿಕೊಳ್ಳಬಹುದೆಂದು ಕುರ್ಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ ಅವರು ಹೇಳಿದರು.
ಅವರು ಸೆ.೦೪ರ(ಸೋಮವಾರ) ದಂದು ಕುರ್ಡಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ರಾಷ್ತ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಘಟಕ ಮಾನವಿ, ಕೆ.ಹೆಚ್.ಪಿ.ಟಿ, ಮಹಿಳಾ ಮತ್ತು ಮಕ್ಕಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ಲಕ್ಷ್ಮೀದೇವಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿದ್ದ ಸ್ವ ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡದ ದೈನಂದಿನ ಬದುಕಿನ ದಿನಗಳ ಮಧ್ಯೆ ಜನರಲ್ಲಿ ಆರೋಗ್ಯ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಇವುಗಳ ನಿವಾರಣೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಹಕಾರಿಯಾಗುತ್ತದೆ. ಎಂದರು.
ಎನ್.ಆರ್.ಎಲ್.ಎಮ್ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಶಿವರಾಜ ಅವರು ಮಾತನಾಡಿ, ರೋಗಗಳು ಬರುವ ಮನ್ನ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು. ಆರೋಗ್ಯವಾಗಿದ್ದರೆ, ಸುಖವಾಗಿ ಬಾಳಬಹುದು. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚು ಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣ ಕಾಣುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿರುವವರಿಗೆ ಆರೋಗ್ಯದ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕ? ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ೮೦ಕ್ಕೂ ಹೆಚ್ಚು ಸ್ವ ಸಹಾಯ ಗುಂಪಿನ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಎನ್.ಆರ್.ಎಲ್.ಎಮ್ ಬ್ಲಾಕ್ ವ್ಯವಸ್ಥಾಪಕ ರಮೇಶ, ವಲಯ ಮೇಲ್ವಿಚಾರಕ ಶರಣಬಸವ, ಕೆ.ಹೆಚ್.ಪಿ.ಟಿಯ ಸಂಯೋಜಕ ಮರಿಲಿಂಗ, ಎಂ.ಬಿ.ಕೆ ಜಮೀಲಾ, ಎಲ್.ಸಿ.ಆರ್.ಪಿ ಸಹರಾ ಬಾನು, ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತಿಗಳ ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.