ಆರೋಗ್ಯ ವ್ಯವಸ್ಥೆ ಬಲವರ್ಧನೆಗೆ ಮೋದಿ ನಿರ್ಧಾರ

ನವದೆಹಲಿ,ಮೇ.೨- ದೇಶದಲ್ಲಿ ಕೊರೊನಾ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಆಮ್ಲಜನಕ, ಔಷಧಿ ಹಾಗೂ ಮಾನವ ಸಂಪನ್ಮೂಲವನ್ನು ಒದಗಿಸುವ ಮೂಲಕ ದೇಶದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಮ್ಲಜನಕ ಔಷಧಿ ಹಾಗೂ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ದಾಖಲೆ ಪ್ರಮಾಣದಲ್ಲಿ ಕೊರೋನೋ ಸಂಖ್ಯೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗಿದೆ ಪರಿಸ್ಥಿತಿ ರಾಜ್ಯಗಳಲ್ಲಿ ನಿರ್ಮಾಣವಾಗಿದೆ.

ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ,ದಾದಿಯರು ಸಂಖ್ಯೆಯು ಹೆಚ್ಚು ಮಾಡುವಂತೆ ಸೂಚಿಸಿರುವ ಅವರು ಕೊರೋನಾ ಸೋಂಕು ಪರೀಕ್ಷೆಯನ್ನು ಮತ್ತಷ್ಟು ಹೆಚ್ಚಳ ಮಾಡುವ ಮೂಲಕ ಸೋಂಕು ಹರಡದಂತೆ ತಡೆಯಲು ಮುಂದಾಗಿ ಎಂದು ಹೇಳಿದ್ದಾರೆ .

ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ಆರೋಗ್ಯ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ದಾದಿಯರು ಸೇರಿದಂತೆ ಇತರೆ ಸಿಬ್ಬಂದಿಯ ಕೆಲಸವನ್ನು ಅವರು ಇದೇ ವೇಳೆ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿನ ಅಲೆ ವ್ಯಾಪಕವಾಗಿ ಹರಡುತ್ತಿದೆ ಅದಕ್ಕೆ ತಕ್ಕ ಹಾಗೆ ಸೌಲಭ್ಯವನ್ನು ಕಲ್ಪಿಸಲು ಮುಂದಾಗುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ,ಹರ್ಷವರ್ಧನ್, ಆರೋಗ್ಯ ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು