ಸಂಜೆವಾಣಿ ವಾರ್ತೆ
ಹೊಸಪೇಟೆ ಜು.21: ನೂತನ ವಿಜಯನಗರ ಜಿಲ್ಲೆ ಹಿಂದುಳಿದಿದ್ದು, ಬೇರು ಮಟ್ಟ ದಿಂದ ಇಲಾಖಾವಾರು ಪ್ರಗತಿ ಅತಿ ಅವಶ್ಯವಾಗಿದೆ. ಅಧಿಕಾರಿಗಳು ಹೆಚ್ಚಿನ ಕಾಳಜಿಯೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವಾಕರ ಎಂ.ಎಸ್.ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿಗಳು ಗುರುವಾರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿ ಹೊಸ ಜಿಲ್ಲೆ ಹಿಂದುಳಿದಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಪ್ರಭಾರಿ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿದ್ದು ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು. ಜೊತೆಗೆ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಹಾಗೂ ವಸತಿ ನಿಲಯಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹೆಚ್ಚಿನ ಕಾಳಜಿವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ಸಮಾಜಕಲ್ಯಾಣ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳ ಪರಿಚಯ ಮಾಡಿಕೊಂಡು ಇಲಾಖೆಗಳ ಪ್ರಸ್ತುತ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು. ಸರ್ಕಾರಿ, ಅನುದಾನಿತ ಶಾಲೆಗಳ ವಿವರ, ವಿದ್ಯಾರ್ಥಿಗಳ ವಿವರ ದಾಖಲಾತಿ ಬಗ್ಗೆ ಮಾಹಿತಿ ಪಡೆದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿಗೆ ದಾಖಲಾಗಿರುವ ಮಕ್ಕಳು, ಲಿಂಗಾನುಪಾತ, ಗರ್ಭಿಣಿಯರ ಮಾಹಿತಿ, ಅಂಗನವಾಡಿ ಕೇಂದ್ರಗಳ ಮಾಹಿತಿ ಸಹ ಪಡೆದುಕೊಂಡರು. ಒಂದನೇ ತರಗತಿಗೆ ಸೇರುವ ಮಕ್ಕಳು ಹಾಗೂ ಹೆರಿಗೆ ಪ್ರಮಾಣ ಸಮಸ್ಥಿತಿಯಲ್ಲಿ ಇರಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯಲ್ಲಿ ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಔಷಧಿಗಳ ವಿವರ, ಸೌಲಭ್ಯಗಳು, ಚಿಕಿತ್ಸೆ ವಿವಿರ ಪಡೆದುಕೊಂಡರು. ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಆಗುವಂತೆಕ್ರಮ ಕೈಗೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹೆರಿಗೆಗೆ ಸಂಬಂಧಿಸಿದಂತೆ ಟಾರ್ಗೆಟ್ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಇಲಾಖೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಉತ್ತಮಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಪ್ರೋತ್ಸಾಹ ನೀಡಬೇಕು ಎಂದ ಅವರು ಶಾಲೆ ಮತ್ತು ಅಂಗನವಾಡಿ ಕಟ್ಟಡಗಳಲ್ಲಿ ದುರಸ್ತಿ ಕಾರ್ಯಗಳಿದ್ದಲ್ಲಿ ನಿರ್ವಹಣೆ ಆಗಬೇಕು. ಚುನಾವಣೆ ಸಮಯದಲ್ಲಿ ನಿರ್ವಹಣೆ ಮಾತ್ರವಲ್ಲದೇ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದರು.
ಶಾಲೆಗಳಲ್ಲಿ ಕರಿಬೇವು, ನಿಂಬೆ ಗಿಡ ಬೆಳೆಸಿ:
ಮಕ್ಕಳಿಗೆ ವಿಟಮಿಸ್ ಸಿ ಮತ್ತು ಡಿ ಅವಶ್ಯಕತೆ ಹೆಚ್ಚಿರುವ ಕಾರಣ ಶಾಲಾ ಆವರಣಗಳಲ್ಲಿ ಕರಿಬೇವು, ನಿಂಬೆಹಣ್ಣು ಗಿಡಗಳನ್ನು ಬೆಳೆಸಬೇಕು ಎಂದು ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಇದನ್ನು ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.
ಉಸ್ತುವಾರಿ ಸಚಿವರಿಂದ ತಾಲ್ಲೂಕು ವಾರು ಸಭೆ:
ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.ಜಮೀರ್‍ಅಹಮದ್‍ಖಾನ್ ಅಧ್ಯಕ್ಷತೆಯಲ್ಲಿ ಆಗಸ್ಟ್ ತಿಂಗಳಲ್ಲಿ ತಾಲ್ಲೂಕುವಾರು ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಅಗತ್ಯ ವರದಿಗಳೊಂದಿಗೆ ಅಧಿಕಾರಿಗಳು ಭಾಗವಹಿಸಬೇಕು ಎಂದರು.
ಆಗಸ್ಟ್ 9 ರಂದು ಜಿಲ್ಲಾ ಕೇಂದ್ರ ಹೊಸಪೇಟೆ ತಾಲ್ಲೂಕಿನಿಂದ ಆರಂಭಗೊಳ್ಳುವ ಪ್ರಗತಿ ಪರಿಶೀಲನಾ ಸಭೆ 10 ರಂದು ಹರಪನಹಳ್ಳಿ, 11 ಹಗರಿಬೊಮ್ಮನಹಳ್ಳಿ, 12 ರಂದು ಹೂವಿನಹಡಗಲಿ ಹಾಗೂ 14 ರಂದು ಕೂಡ್ಲಿಗಿ ತಾಲ್ಲೂಕಿನಲ್ಲಿ ನಡೆಯಲಿದೆಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್. ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.