
ಬೆಂಗಳೂರು, ಫೆ. ೨೦- ಜನ ಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಅಭಾ ಕಾರ್ಡ್ ಪರಿಚಯಿಸಲಾಗಿದ್ದು, ದೇಶದ ಯಾವುದೇ ಮೂಲೆಯಲ್ಲಿ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ವಿಧಾನಪರಿಷತ್‌ನಲ್ಲಿಂದು ಹೇಳಿದರು.
ಅಭಾ ಕಾರ್ಡ್‌ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಕಾರ್ಡುದಾರರು ದೇಶದ ಯಾವುದೇ ಮೂಲೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.
ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ವರ್ಷ ಸೆಪ್ಟೆಂಬರ್‌ನಿಂದ ಈವರ್ಷ ಜನವರಿ ಅಂತ್ಯದವರೆಗೆ ಆಯುಷ್‌ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಆರೋಗ್ಯ ಕರ್ನಾಟಕ ಯೋಜನೆಯಡಿ ೧, ೨೮,೪೭೫೫ ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ಯೋಜನೆಯಡಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೩೯,೩೮,೯೨೩ ಮಂದಿ ಚಿಕಿತ್ಸೆ ಪಡೆದಿದ್ದಾರೆ ಎಂದು ಅವರು ಹೇಳಿದರು.
ಆಯುಷ್ ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಇದುವರೆಗೂ ೩೦೯೭ ಕೋಟಿ ರೂ. ಖರ್ಚು ಮಾಡಲಾಗಿದೆ ಎಂದರು.
೩೯ ಲಕ್ಷ ಮಂದಿ ಜನರು ಆರೋಗ್ಯ ಸೇವೆ ಪಡೆದಿದ್ದು, ಇದರಲ್ಲಿ ಶೇ. ೮೦ ರಷ್ಟು ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದು, ಶೇ. ೨೦ ರಷ್ಟು ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದಿದ್ದಾರೆ ಎಂದು ಅವರು ಹೇಳಿದರು.
ತಜ್ಞ ವೈದ್ಯರ ನೇಮಕಾತಿ
ರಾಜ್ಯದ ಆಯುಷ್ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ೧೬೮ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ೧೬೦ ತಜ್ಞ ವೈದ್ಯರ ಪೈಕಿ ೧೩೧ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದ ೨೯ ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.