ಆರ್ಥಿಕ, ರಾಜಕೀಯ ಸಮಸ್ಯೆಗಳಿಗೆ ಎನ್‌ಇಪಿ ರಾಮಬಾಣ

ಬೆಂಗಳೂರು, ನ. ೧೩- ದೇಶದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ರಾಮ ಬಾಣವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್‌ನಾರಾಯಣ ಹೇಳಿದರು.
ಬೆಂಗಳೂರಿನಲ್ಲಿಂದು ಕರ್ನಾಟಕ ಸರ್ಕಾರ ಮತ್ತು ಅಂತಾರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಜಂಟಿಯಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ನೂತನ ಶಿಕ್ಷಣ ನೀತಿ ಜಾರಿಯಿಂದ ಇನ್ನು ೨೦ ವರ್ಷಗಳಲ್ಲಿ ಭಾರತ ಜಗತ್ತಿನಲ್ಲೇ ಅಗ್ರ ಸ್ಥಾನಕ್ಕೆ ಏರಲಿದೆ ಎಂದರು.
ಶಿಕ್ಷಣದಲ್ಲಿ ಬದಲಾವಣೆ ತರುವ ಮೂಲಕ ದೇಶವನ್ನು ಬದಲಿಸಬಹುದು ಎನ್ನುವುದು ಪ್ರಧಾನಿ ಮೋದಿ ಅವರ ಆಶಯ. ಅದರಂತೆ ೩೪ ವರ್ಷಗಳ ನಂತರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಲಾಗುತ್ತಿದೆ ಎಂದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಇಂದು ನಡೆದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಮಾವೇಶವನ್ನು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿವಿಗಳ ಕುಲಪತಿಗಳು, ಉಪಕುಲಪತಿಗಳು, ರಿಜಿಸ್ಟ್ರಾರ್‌ಗಳು, ನಿರ್ದೇಶಕರು ಹಾಗೂ ತೆರೆಸಾಜಾಕೋಬ್ ಉಪಸ್ಥಿತರಿದ್ದರು.


ಈ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ೧೦೦ ಕ್ಕೆ ೧೦೦ ರಷ್ಟು ಸಕಾರಾತ್ಮಕವಾಗಿದೆ. ದುರ್ಬಲ ವರ್ಗದ ಮಕ್ಕಳಿಗೆ ಶಿಕ್ಷಣವನ್ನು ಈ ನೀತಿಯಲ್ಲಿ ಪ್ರಧಾನ ಹಕ್ಕನ್ನಾಗಿ ಮಾಡಲಾಗಿದೆ ಎಂದರು.
ಈಗಿರುವ ಶಿಕ್ಷಣ ಪದ್ಧತಿಯಲ್ಲಿ ಶೇ. ೨೦ ರಷ್ಟು ವಿದ್ಯಾರ್ಥಿಗಳು ಮಾತ್ರ ಉದ್ಯೋಗಕ್ಕೆ ಅರ್ಹರಾಗುತ್ತಿದ್ದರು. ನೂತನ ಶಿಕ್ಷಣ ನೀತಿಯಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಉದ್ಯೋಗಕ್ಕೆ ಬೇಕಾದ ಅರ್ಹತೆ ಮತ್ತು ಸಾಮರ್ಥ್ಯವನ್ನು ತನ್ನದಾಗಿಸಿಕೊಳ್ಳಲಿದ್ದಾರೆ. ಕೌಶಲ್ಯ ಮತ್ತು ಡಿಜಿಟಲ್ ಕಲಿಕೆಗೆ ಈ ನೀತಿಯಲ್ಲಿ ಒತ್ತು ನೀಡಲಾಗಿದೆ ಎಂದರು.
ನೂತನ ಶಿಕ್ಷಣ ನೀತಿಯಿಂದ ಸರ್ಕಾರಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಮೊದಲು ಲಾಭವಾಗಲಿದೆ. ನೂತನ ಶಿಕ್ಷಣ ನೀತಿ ಬಗ್ಗೆ ಕೇಳಿ ಬರುತ್ತಿರುವ ಅಪ ಪ್ರಚಾರಗಳನ್ನು ನಂಬುವದು ಬೇಡ. ಅಲ್ಪಸಂಖ್ಯಾತರು ಸೇರಿದಂತೆ ಯಾರೂ ಅನಗತ್ಯ ಭಯ, ಸಂಶಯ ಇಟ್ಟುಕೊಳ್ಳಬಾರದು ಎಂದರು.
ನೂತನ ಶಿಕ್ಷಣ ನೀತಿಯಿಂದ ಶಿಕ್ಷಣ ಸಂಸ್ಥೆಗಳಿಗೂ ಸ್ವಾತಂತ್ರ್ಯ ಮತ್ತು ಸ್ವಾಯತತ್ತೆ ಸಿಗಲಿದೆ. ವಿಶ್ವಗುಣಮಟ್ಟದ ಸಂಸ್ಥೆಗಳೊಂದಿಗೆ ಸಹಭಾಗಿತ್ವ ಹೊಂದುವ ಮೂಲಕ ಜಾಗತಿಕ ಮಟ್ಟದ ಶಿಕ್ಷಣವು ವಿದ್ಯಾರ್ಥಿಗಳಿಗೆ ಸಿಗಲಿದೆ ಎಂದು ಅವರು ಹೇಳಿದರು.
ಈ ಸಮಾವೇಶದಲ್ಲಿ ಐಎಎಸ್ಡಿಸಿ ನಿರ್ದೇಶಕಿ ತೆರೇಸಾ ಜಾಕೋಬ್, ಕಾರ್ಯನಿರ್ವಾಹಕ ನಿರ್ದೇಶಕ ಟಾಮ್ ಜೋಸೆಫ್, ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಶಿ ಮತ್ತಿತರರು ಉಪಸ್ಥಿತರಿದ್ದರು.