ಆವಿಷ್ಕಾರ, ನಾವೀನ್ಯತೆ ಜನರಿಗೆ ತಲುಪಲಿ: ಉಪರಾಷ್ಟ್ರಪತಿ

ಬೆಂಗಳೂರು, ನ. ೧೭- ಹೊಸ ಹೊಸ ಸಂಶೋಧನೆ, ಆವಿಷ್ಕಾರ, ನಾವಿನ್ಯತೆ, ಆಧುನಿಕ ತಂತ್ರಜ್ಞಾನ ಎಲ್ಲವೂ ಜನಸಾಮಾನ್ಯರಿಗೆ ತಲುಪಿ, ಅವರಿಗೂ ಅವುಗಳಿಂದ ಸಂತಸ ಸಿಗುವಂತಾಗಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಹೇಳಿದರು.
ಆಧುನಿಕ ತಂತ್ರಜ್ಞಾನ, ಸಂಶೋಧನೆ, ಜ್ಞಾನ ಆಧಾರಿತ ಆರ್ಥಿಕ ವ್ಯವಸ್ಥೆಗಳು ಅಂತಿಮವಾಗಿ ಜನಸಾಮಾನ್ಯರಿಗೆ ಸಂತೋಷವನ್ನು ತರುವುದೇ ನಿರ್ಣಾಯಕ ಎಂದು ಅವರು ಬೆಂಗಳೂರು ತಂತ್ರಜ್ಞಾನ ಶೃಂಗದ ಉದ್ಘಾಟನಾ ಭಾಷಣದಲ್ಲಿ ಹೇಳಿದರು.
ಜಗತ್ತು ಈಗ ಜ್ಞಾನಾಧಾರಿತವಾಗಿ ರೂಪುಗೊಳ್ಳುತ್ತಿದ್ದು, ಕೋವಿಡ್ ನಂತರ ಡಿಜಿಟಲೀಕರಣಗೊಳ್ಳುತ್ತಿದೆ. ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳು ಉತ್ತಮವಾಗಿದ್ದರೂ ಅಂತಿಮವಾಗಿ ತಂತ್ರಜ್ಞಾನದ ಲಾಭ ಸಮಾಜದ ಕಟ್ಟಕಡೆಯ ಮನುಷ್ಯನಿಗೆ ತಲುಪಬೇಕಾದುದ್ದು ಮುಖ್ಯ ಎಂದರು.
ತಂತ್ರಜ್ಞಾನದ ಮೂಲಕ ಇಡೀ ವ್ಯವಸ್ಥೆಯನ್ನು ಪರಿವರ್ತಿಸಬೇಕು ಎಂಬುದು ಪ್ರಧಾನಿ ಮೋದಿಯವರ ಗುರಿಯಾಗಿದೆ. ತಂತ್ರಜ್ಞಾನದೊಂದಿಗೆ ಎಲ್ಲರೂ ಕರ್ತವ್ಯ ಪ್ರಜ್ಞೆಯನ್ನು ಮೈಗೂಡಿಸಿಕೊಂಡಾಗ ದೇಶವು ಶಕ್ತಿಶಾಲಿಯಾಗಿ ಹೊರ ಹೊಮ್ಮುತ್ತದೆ ಎಂದರು.
ದೇಶದ ಉದ್ಯೋಗ ಸೃಷ್ಠಿಯಲ್ಲಿ ಖಾಸಗಿ ವಲಯದ ಪಾತ್ರ ಬಹುಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡೆ ಪ್ರಧಾನಿ ನರೇಂದ್ರ ಮೋದಿಯವರು ಸುಧಾರಣೆ-ಸಾಧನೆ-ಪರಿವರ್ತನೆ ಎಂಬುದನ್ನೆ ಮಂತ್ರವಾಗಿಸಿಕೊಂಡು ನೀತಿಗಳನ್ನು ರೂಪಿಸುತ್ತಿದ್ದಾರೆ ಎಂದರು.
ಜಗತ್ತಿನ ಪ್ರಖ್ಯಾತ ಉದ್ಯಮಗಳಲ್ಲಿ ಭಾರತೀಯರು ನಾಯಕತ್ವ ವಹಿಸಿಕೊಂಡಿರುವುದು ನಮ್ಮ ಭೌತಿಕ ಪ್ರಗತಿಯನ್ನು ದೃಢಪಡಿಸುತ್ತದೆ ಎಂದು ಅವರು ಹೇಳಿದರು.
ದೇಶವು ಅತ್ಯಂತ ಕ್ರಿಯಾಶೀಲವಾಗಿದೆ. ನಿರ್ಧಿಷ್ಟವಾಗಿ ಬೆಂಗಳೂರು ತಂತ್ರಜ್ಞಾನ ನಗರಿಯಾಗಿದೆ. ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಸಾರವಾದ ಹಂಚಿಕೊಳ್ಳುವಿಕೆ ಮತ್ತು ಇನ್ನೊಬ್ಬರ ಬಗೆಗಿನ ಕಾಳಜಿ ಎರಡನ್ನು ತಂತ್ರಜ್ಞಾನದ ಮೂಲಕ ಮುಂದುವರೆಸಿಕೊಂಡು ಹೋಗಬೇಕು. ಹಾಗೆಯೇ ದೇಶದ ಅವಿಭಾಜ್ಯ ಅಂಗವಾಗಿರುವ ಕೃಷಿಗೂ ಒತ್ತು ನೀಡಬೇಕು ಎಂದು ಹೇಳಿದರು.
ನ್ನಡದಲ್ಲೇ ಭಾಷಣ
ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಆರಂಭದಲ್ಲಿ ಕನ್ನಡದಲ್ಲೇ ತಮ್ಮ ಭಾಷಣ ಆರಂಭಿಸಿದ್ದು ವಿಶೇಷವಾಗಿತ್ತು. ಹಾಗೆಯೇ ಅವರು ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್‌ರಾಜಕುಮಾರ್ ಅವರ ನಿಧನಕ್ಕೂ ತಮ್ಮ ಭಾಷಣದಲ್ಲಿ ಸಂತಾಪ ವ್ಯಕ್ತಪಡಿಸಿದರು.
ತಂತ್ರಜ್ಞಾನದ ತೊಟ್ಟಿಲು
ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಸ್ವಾಗತ ಭಾಷಣ ಮಾಡಿದ ಐಟಿ-ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ್‌ನಾರಾಯಣ ಅವರು, ಬೆಂಗಳೂರು ತಂತ್ರಜ್ಞಾನದ ತೊಟ್ಟಿಲಾಗಿದೆ. ಕೋವಿಡ್ ಸೋಂಕಿನ ನಂತರ ಅಭಿವೃದ್ಧಿಯ ಮಾನದಂಡಗಳು ಬದಲಾಗಿದ್ದು, ರಾಜ್ಯವು ಈ ಪರಿಸ್ಥಿತಿಯನ್ನು ತಂತ್ರಜ್ಞಾನದ ಬಲದಿಂದ ಸಾಕಾರತ್ಮಕವಾಗಿ ಬಳಸಿಕೊಳ್ಳುತ್ತಿದೆ ಎಂದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯವು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿ ನಿಲ್ಲಲಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜು, ವಿವಿಧ ವಿಷನ್ ಗ್ರೂಪ್‌ಗಳ ಮುಖ್ಯಸ್ಥರಾದ ಗೋಪಾಲಕೃಷ್ಣನ್, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.