ಆಸ್ಪತ್ರೆಗಳು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು: ರಿಶಿ ಆನಂದ

ಸಂಜೆವಾಣಿ ವಾರ್ತೆ,
ವಿಜಯಪುರ,ಏ.25 :ವೈದ್ಯರು ಹಾಗೂ ಸಿಬ್ಬಂದಿಗಳು ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಜನಸ್ನೇಹಿಯಾಗಿ ಕಾರ್ಯ ನಿವರ್ಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಮಂಗಳವಾರ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಇಲ್ಲಿನ ವೈದ್ಯಕೀಯ ಗುಣಮಟ್ಟ, ಚಿಕಿತ್ಸಾ ವಿಧಾನ ಹಾಗೂ ಸೌಲಭ್ಯಗಳ ಕುರಿತು ಚರ್ಚಿಸಿದರು. ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಮತ್ತು ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಗೂ ಸಹ ಬಂದು ಆರೋಗ್ಯ ತಪಾಸಣೆ ಮಾಡಿಕೊಂಡು ಹೆಚ್ಚಿನ ಚಿಕಿತ್ಸೆ ಪಡೆದುಕೊಳ್ಳಲು ತಿಳಿಸಿದರು.
ಈ ವೇಳೆ ಆಸ್ಪತ್ರೆಯ ಚುಚ್ಚುಮದ್ದು ನೀಡುವ ಕೊಠಡಿ, ಔಷಧಿ ಸಂಗ್ರಹಣೆ ಕೊಠಡಿ, ಒಳರೋಗಿಗಳ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಆಸ್ಪತ್ರೆಯ ಎಲ್ಲಾ ವಿಭಾಗಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯೀಕರಣ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಪ್ರತಿದಿನ ಆಸ್ಪತ್ರೆಯ ಎಲ್ಲಾ ವಿಭಾಗಗಳಲ್ಲಿ ಸ್ವಚ್ಛತೆಗೆ ಆದÀ್ಯತೆ ನೀಡಬೇಕು ಎಂದು ಅಲ್ಲಿನ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಭೇಟಿ:
ಇದೇ ವೇಳೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಶಿ ಆನಂದ ಕೂಡಗಿ ಎಲ್.ಟಿ ಗ್ರಾಮದ ಸರಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 108 ಮತ್ತು 109 ಗಳಿಗೆ ಭೇಟಿ ನೀಡಿ ಮತಗಟ್ಟೆಗಳ ಮೂಲಭೂತ ಸೌಲಭ್ಯಗಳಾದ ಕಟ್ಟಡ ದುರಸ್ತಿ, ಕುಡಿಯುವ ನೀರಿನ ಸೌಲಭ್ಯ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ, ರ್ಯಾಂಪ್ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ನೆರಳಿನ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಮತದಾನದ ದಿನ ಮತದಾರರಿಗೆ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ಬಳಿಕ ಸರಕಾರಿ ಪ್ರಾಥಮಿಕ ಶಾಲೆಯ ಬಿಸಿಯೂಟದ ಅಡುಗೆ ಕೋಣೆಗೆ ಭೇಟಿ ನೀಡಿ, ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸುವ ಕುರಿತು ಪರಿಶೀಲಿಸಿದರು.
ಮಕ್ಕಳೊಂದಿಗೆ ಸಂವಾದ ನಡೆಸಿ ಶಾಲೆಯಲ್ಲಿ ಬಿಸಿಯೂಟ ಹಾಗೂ ಶಿಕ್ಷಣದ ಗುಣಮಟ್ಟದ ಕುರಿತು ಚರ್ಚಿಸಿದರು. ಇದೇ ವೇಳೆ ಪ್ರತಿದಿನ ಅಡುಗೆ ಕೋಣೆಯನ್ನು ಶುಚಿಗೊಳಿಸಬೇಕು, ಸ್ವಚ್ಛತೆ ಕಾಪಾಡಿಕೊಂಡು ಮಕ್ಕಳಿಗೆ ಆಹಾರ ತಯಾರಿಸಬೇಕು ಮತ್ತು ಸರಿಯಾದ ಸಮಯಕ್ಕೆ ಮಕ್ಕಳಿಗೆ ಬಿಸಿಯೂಟ ವಿತರಿಸಬೇಕು ಎಂದು ಅಡುಗೆ ಸಿಬ್ಬಂದಿಯವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೊಲ್ಹಾರ ತಾಲೂಕಿನ ಕಾರ್ಯ ನಿರ್ವಾಹಕ ರವಿಕುಮಾರ ಹುಕ್ಕೇರಿ, ಜಿಲ್ಲಾ ಪಂಚಾಯತಿಯ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಡಿ.ಪಿ. ಗೊವಿಂದರಾಜು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಅಶ್ವಿನಿ ತುಂಬರಮಟ್ಟಿ, ಕೂಡಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ ಕೋಟ್ಯಾಳ, ಕೊಲ್ಹಾರ ತಾಲೂಕು ಪಂಚಾಯತಿಯ ತಾಂತ್ರಿಕ ಸಂಯೋಜಕರು, ಐ.ಇ.ಸಿ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿ.ಎಪ್.ಟಿ ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.