ಆಸ್ಪತ್ರೆಗೆ ಸಚಿವರ ಭೇಟಿ: ಆರೋಗ್ಯಾಧಿಕಾರಿಗಳಿಂದ ಮಾಹಿತಿ ಸಂಗ್ರಹ

ಕೆ.ಆರ್.ಪೇಟೆ. ಏ.24: ತಾಲ್ಲೂಕಿನಲ್ಲಿ ಕೊರೋನಾ ಲಸಿಕೆ ದಾಸ್ತಾನು ಹಾಗೂ ವಿತರಣೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಕೊರೋನಾ ಎರಡನೇ ಡೋಸ್ ಲಸಿಕೆ ಪಡೆದರು. ನಂತರ ಆಸ್ಪತ್ರೆಯ ಅಧಿಕಾರಿಗಳೊಡನೆ ಸಭೆ ನಡೆಸಿ ಇಲ್ಲಿಯವರೆಗೆ ಹಿರಿಯ ನಾಗರೀಕರು ಹಾಗೂ 45 ವರ್ಷದ ಮೇಲ್ಪಟ್ಟವರು ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಪಡೆದರು ಜಿಲ್ಲಾ ಹಂತದಲ್ಲಿ ಲಸಿಕೆಯನ್ನು ನಿಗದಿತ ಪ್ರಮಾಣದಲ್ಲಿ ನೀಡುತ್ತಿದ್ದಾರೆಯೇ ಅವುಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ತಾಲ್ಲೂಕು ಆರೋಗ್ಯಾಧಿಕಾರಿಗಳು ಇಲ್ಲಿಯವರೆಗೂ ಲಸಿಕೆ ದಾಸ್ತಾನಿನ ಕೊರತೆ ಆಗಿಲ್ಲ ಪ್ರತೀದಿನ 100-120 ಮಂದಿಗೆ ಲಸಿಕೆ ನೀಡುತ್ತಿದ್ದೇವೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಲಸಿಕೆ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಕೊರೋನಾ ಪರೀಕ್ಷೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಬೇಕು, ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ನೀಡಬೇಕು. ಮನೆಯಲ್ಲಿ ಚಿಕಿತ್ಸೆ ನೀಡಿದರೆ ಅವರುಗಳು ಗ್ರಾಮದ ಇತರರಿಗೆ ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸೋಂಕಿತರನ್ನು ಆರೈಕೆ ಮಾಡುವಲ್ಲಿ ವಿಳಂಬ ಹಾಗೂ ಉದಾಸೀನ ಮಾಡಬಾರದು. ಆರೋಗ್ಯ ಇಲಾಖೆಗೆ ಅತೀ ಅಗತ್ಯವಾಗಿ ಬೇಕಾಗಿರುವ ಅವಶ್ಯಕ ವಸ್ತುಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಪೂರೈಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಮೂಡ ಅಧ್ಯಕ್ಷ ಕೆ.ಶ್ರೀನಿವಾಸ್. ತಹಶೀಲ್ದಾರ್ ಎಂ.ಶಿವಮೂರ್ತಿ,ಮನ್ ಮುಲ್ ನಿರ್ದೇಶಕ ಕೆ.ಜಿ.ತಮ್ಮಣ್ಣ ಆಡಳಿತ ವೈದ್ಯಾಧಿಕಾರಿ ಡಾ.ಜಯಂತ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಸೇರಿದಂತೆ ಹಲವರು ಹಾಜರಿದ್ದರು.